image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಬಿಎಂಎಸ್ ವತಿಯಿಂದ ಕಾರ್ಮಿಕರ ಬೃಹತ್ ಪ್ರತಿಭಟನೆ

ಮಂಗಳೂರಿನಲ್ಲಿ ಬಿಎಂಎಸ್ ವತಿಯಿಂದ ಕಾರ್ಮಿಕರ ಬೃಹತ್ ಪ್ರತಿಭಟನೆ

ಮಂಗಳೂರು : ನಗರದ ರಾಜಾಜಿ ಪಾರ್ಕ್‌ನಲ್ಲಿ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಕಾರ್ಮಿಕರ 11 ಪ್ರಮುಖ ರಾಷ್ಟ್ರೀಯ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೃಹತ್ ಕಾರ್ಮಿಕ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಎಂಎಸ್ ರಾಜ್ಯ ಉಪಾಧ್ಯಕ್ಷ ಸತೀಶ್ ಶೆಟ್ಟಿ, ಕಾರ್ಮಿಕರ ದುಡಿಮೆಯೇ ದೇಶದ ಆರ್ಥಿಕ ಅಭಿವೃದ್ಧಿಯ ಆಧಾರವಾಗಿದ್ದು, ಕೇಂದ್ರ ಸರ್ಕಾರವು ಕಾರ್ಮಿಕರ ಬೇಡಿಕೆಗಳನ್ನು ವಿಳಂಬ ಮಾಡದೆ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಆಶಾ, ಅಂಗನವಾಡಿ, ಅಕ್ಷರ ದಾಸೋಹ ಸೇರಿದಂತೆ ಯೋಜನಾ ಕಾರ್ಮಿಕರಿಗೆ ಗೌರವಧನ, ಸಾಮಾಜಿಕ ಭದ್ರತೆ, ಗ್ರಾಚ್ಯುಟಿ, ಪಿಂಚಣಿ, ತುಟ್ಟಿ ಭತ್ಯೆ, ಬೋನಸ್ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಅವರು ಆಗ್ರಹಿಸಿದರು.

ಬಿಎಂಎಸ್ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ವಕೀಲ ಅನಿಲ್ ಕುಮಾರ್ ಯು ಮಾತನಾಡಿ, ಕಟ್ಟಡ ಕಾರ್ಮಿಕರಿಂದ ಹಿಡಿದು ರಿಕ್ಷಾ ಚಾಲಕರು, ಆಶಾ-ಅಂಗನವಾಡಿ, ಬೀಡಿ ಹಾಗೂ ಅಸಂಘಟಿತ ವಲಯದ ವಿವಿಧ ಕ್ಷೇತ್ರದ ಕಾರ್ಮಿಕರು ಒಂದೇ ವೇದಿಕೆಯಲ್ಲಿ ಸೇರಿರುವುದು ಒಗ್ಗಟ್ಟಿನ ಪ್ರತೀಕವಾಗಿದೆ ಎಂದರು. ಎಂಆರ್‌ಪಿಎಲ್, ಎನ್‌ಎಂಪಿಟಿ, ಕೆಐಒಸಿಎಲ್ ಸೇರಿದಂತೆ ಎಲ್ಲಾ ಕ್ಷೇತ್ರಗಳ ಕಾರ್ಮಿಕರ ಮೂಲ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಎಂದು ಅವರು ಹೇಳಿದರು.

ಪ್ರತಿಭಟನೆಯ ಬಳಿಕ ಬಿಎಂಎಸ್ ವತಿಯಿಂದ ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿ ರಾಜು ಅವರ ಮೂಲಕ ಕೇಂದ್ರ ಪ್ರಧಾನ ಮಂತ್ರಿಯವರಿಗೆ ಹಾಗೂ ರಾಜ್ಯ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಅಲ್ಲದೆ, ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೂ ಮನವಿ ಸಲ್ಲಿಸಲಾಯಿತು. ವಿವಿಧ ವಲಯಗಳ ಕಾರ್ಮಿಕರು ಮತ್ತು ಬಿಎಂಎಸ್ ಪ್ರಮುಖರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ