image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಭರ್ಜರಿ ಗೆಲುವು

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಭರ್ಜರಿ ಗೆಲುವು

ಮಂಗಳೂರು : ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತದ ಆಡಳಿತ ಮಂಡಳಿ ಚುನಾವಣೆಯಲ್ಲಿ ಮೈಸೂರು ವಿಭಾಗದ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಅಭೂತಪೂರ್ವ ಜಯ ಸಾಧಿಸಿದ್ದಾರೆ. ಅತ್ಯಂತ ಕುತೂಹಲ ಕೆರಳಿಸಿದ್ದ ಈ ಚುನಾವಣೆಯಲ್ಲಿ ಮೈಸೂರು ವಿಭಾಗದ ಒಟ್ಟು 18 ಮತಗಳಲ್ಲಿ ಸಂಪೂರ್ಣ 18 ಮತಗಳನ್ನು ಪಡೆಯುವ ಮೂಲಕ ಅವರು ಸರ್ವಾನುಮತದ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಈ  ವಿಜಯದೊಂದಿಗೆ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಕಳೆದ 62 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಪ್ರತಿಷ್ಠಿತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಪ್ರಥಮ ಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕರಾವಳಿ ಭಾಗದ ಸಹಕಾರಿ ಕ್ಷೇತ್ರಕ್ಕೆ ಈ ಆಯ್ಕೆಯು ಹೊಸ ಚೈತನ್ಯವನ್ನು ತುಂಬಿದ್ದು, ಜಿಲ್ಲೆಯ ಸಹಕಾರ ಕ್ಷೇತ್ರದ ಇತಿಹಾಸದಲ್ಲಿ ನೂತನ ಅಧ್ಯಾಯವನ್ನು ಬರೆದಿದೆ.

ಸಹಕಾರ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್‌ಸಿಡಿಸಿಸಿ) ಬ್ಯಾಂಕ್ ನಿರ್ದೇಶಕರಾಗಿ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾಗಿ ಹಾಗೂ ಇರ್ದೆ ಬೆಟ್ಟಂಪಾಡಿ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಮಟ್ಟದ ಸಂಸ್ಥೆಯಿಂದ ಹಿಡಿದು ಜಿಲ್ಲಾ ಮಟ್ಟದವರೆಗೆ ಸಹಕಾರಿ ರಂಗವನ್ನು ಯಶಸ್ವಿಯಾಗಿ ಮುನ್ನಡೆಸಿದ ಅನುಭವ ಅವರದ್ದಾಗಿದೆ. ಇದೀಗ ರಾಜ್ಯ ಮಟ್ಟದ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರದ ಧ್ವನಿಯಾಗಿ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುವ ಮಹತ್ತರ ಜವಾಬ್ದಾರಿ ಅವರ ಹೆಗಲೇರಿದೆ.

Category
ಕರಾವಳಿ ತರಂಗಿಣಿ