image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ: ಮಂಗಳೂರಿನಲ್ಲಿ ತಪಾಸಣೆಗೆ ಎಡಿಸಿ ಸೂಚನೆ

21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ನಿಷೇಧ: ಮಂಗಳೂರಿನಲ್ಲಿ ತಪಾಸಣೆಗೆ ಎಡಿಸಿ ಸೂಚನೆ

ಮಂಗಳೂರು: 21 ವರ್ಷದ ಒಳಗಿನ ವ್ಯಕ್ತಿಗಳಿಗೆ ಸಿಗರೇಟ್ ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಜು ಕೆ. ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಈ ಸರಣಿ ಸೂಚನೆಗಳನ್ನು ನೀಡಿದರು.

ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯಿದೆಯ ತಿದ್ದುಪಡಿ ಅನ್ವಯ 21 ವರ್ಷದೊಳಗಿನ ಯಾವುದೇ ವ್ಯಕ್ತಿಗಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದ್ದು, ಅಂಗಡಿಗಳಲ್ಲಿ ಇವುಗಳನ್ನು ಮಾರಾಟ ಮಾಡುವ ವ್ಯಾಪಾರಿಯ ವಯಸ್ಸು ಕೂಡ ಕನಿಷ್ಠ 21 ವರ್ಷ ಆಗಿರಬೇಕಾಗುತ್ತದೆ. ಸಿಗರೇಟ್‌ಗಳನ್ನು ಸಂಪೂರ್ಣ ಪ್ಯಾಕ್‌ನಲ್ಲೇ ಮಾರಾಟ ಮಾಡಬೇಕು ಹಾಗೂ ಚಿಲ್ಲರೆಯಾಗಿ ಮಾರಾಟ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಶಾಲಾ-ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ಇವುಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಈ ಕಾಯಿದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸ್ಥಳೀಯ ಸಂಸ್ಥೆಗಳು, ಆರೋಗ್ಯ ಇಲಾಖೆ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಬೇಕು. ನಿಯಮ ಉಲ್ಲಂಘಿಸಿ ಅಪ್ರಾಪ್ತರಿಗೆ ಸಿಗರೇಟ್ ಮಾರಾಟ ಮಾಡುವುದು ಕಂಡುಬಂದರೆ ಅಂತಹ ಅಂಗಡಿ, ಹೋಟೆಲ್ ಅಥವಾ ಕೆಫೆಗಳ ಲೈಸೆನ್ಸ್ ರದ್ದುಗೊಳಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಅಥವಾ ತಂಬಾಕು ಉಗಿಯುವವರಿಗೆ 1,000 ರೂಪಾಯಿ ದಂಡ ವಿಧಿಸಲಾಗುವುದು ಮತ್ತು ಸಿಗರೇಟ್ ಸೇದುವವರಿಗೆ ಅನುಕೂಲವಾಗುವಂತೆ ಲೈಟರ್ ಅಥವಾ ಬೆಂಕಿಪೆಟ್ಟಿಗೆ ಇಡುವವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಶಾಲಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಬ್ಯಾಗ್‍ಗಳನ್ನು ಆಗಾಗ ಪರಿಶೀಲಿಸಬೇಕು ಹಾಗೂ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಎಸ್‍ಡಿಎಂಸಿಗಳು ಪ್ರತಿ ತಿಂಗಳು ‘ತಂಬಾಕು ಮುಕ್ತ ಶಾಲೆ’ ಎಂದು ದೃಢೀಕರಣ ನೀಡಬೇಕು. ಈ ಎಲ್ಲಾ ತಪಾಸಣೆಗಳ ಕುರಿತು ಮುಂದಿನ ಸಭೆಯಲ್ಲಿ ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Category
ಕರಾವಳಿ ತರಂಗಿಣಿ