ಮಂಗಳೂರು : ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ 'ವಿಕಸಿತ ಭಾರತಕ್ಕೆ ನಶಾಮುಕ್ತ ಭಾರತ' ವಿಷಯದ ಕುರಿತು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ನಾಟಕ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಾಟಕಗಳ ಮೂಲಕ ಸಾರ್ವಜನಿಕರಲ್ಲಿ ಮಾದಕ ವ್ಯಸನದ ಕುರಿತು ಜಾಗೃತಿ ಮೂಡಿಸಲು ಸಾಧ್ಯವಿದೆ ಎಂದು ಹೇಳಿದರು. ಪೊಲೀಸ್ ಇಲಾಖೆಯ 'ಸನ್ಮಿತ್ರ' ಆಪ್ ಹಾಗೂ ಕ್ಯುಆರ್ ಕೋಡ್ ಮೂಲಕ ಸಾರ್ವಜನಿಕರು ಮಾದಕ ವ್ಯಸನಿಗಳ ಕುರಿತು ದೂರು ದಾಖಲಿಸುವ ವ್ಯವಸ್ಥೆಯ ಬಗ್ಗೆಯೂ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ಡಾ. ಶಾಂತಾರಾಮ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುವುದಿಲ್ಲ ಎಂದು ಶಪಥ ಮಾಡಬೇಕು ಎಂದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಅಧ್ಯಕ್ಷತೆ ವಹಿಸಿ, ಮಾದಕ ವಸ್ತು ಸೇವನೆ ಮತ್ತು ಅತಿಯಾದ ಮೊಬೈಲ್ ಬಳಕೆ ಇಡೀ ಕುಟುಂಬದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.
ಈ ನಾಟಕ ಸ್ಪರ್ಧೆಯಲ್ಲಿ ಮಂಗಳೂರಿನ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಪ್ರಥಮ ಬಹುಮಾನ, ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜು ದ್ವಿತೀಯ ಬಹುಮಾನ ಹಾಗೂ ಹಿರಿಯಡ್ಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೃತೀಯ ಬಹುಮಾನ ಪಡೆದುಕೊಂಡವು.