image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಂಬಳ ಕ್ರೀಡೆಯ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ: ಡಿ.ಕೆ. ಶಿವಕುಮಾರ್ ಅಭಯ

ಕಂಬಳ ಕ್ರೀಡೆಯ ಅಭಿವೃದ್ಧಿಗೆ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ: ಡಿ.ಕೆ. ಶಿವಕುಮಾರ್ ಅಭಯ

ಬೆಂಗಳೂರು : ರಾಜ್ಯ ಮಾನ್ಯತೆ ಪಡೆದಿರುವ ಕಂಬಳ ಕ್ರೀಡೆಯ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂಬರುವ ರಾಜ್ಯ ಬಜೆಟ್‌ನಲ್ಲಿ 5 ಕೋಟಿ ರೂಪಾಯಿ ವಿಶೇಷ ಅನುದಾನ ನೀಡುವುದಾಗಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ. ಕಂಬಳದ ಮಹಾಪೋಷಕ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಡಾ. ಎಂ.ಎನ್‌. ರಾಜೇಂದ್ರ ಕುಮಾರ್‌ ಅವರ ನೇತೃತ್ವದಲ್ಲಿ, ರಾಜ್ಯ ಕಂಬಳ ಅಸೋಸಿಯೇಷನ್‌ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್‌ ಶೆಟ್ಟಿ ಬೆಳಪು ಒಳಗೊಂಡ ನಿಯೋಗವು ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ಆಯೋಜನೆಯಾಗುವ 27 ಕಂಬಳಗಳ ನಿರ್ವಹಣೆಗೆ 5 ಕೋಟಿ ರೂ. ವಿಶೇಷ ಅನುದಾನ ಒದಗಿಸಬೇಕು ಹಾಗೂ ಈ ಕುರಿತು ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸಬೇಕೆಂದು ನಿಯೋಗವು ಮನವಿ ಮಾಡಿತು. ಈ ಮನವಿಗೆ ಸ್ಪಂದಿಸಿದ ಅವರು ಅನುದಾನ ಒದಗಿಸುವ ಅಭಯ ನೀಡಿದರು. ಇದೇ ವೇಳೆ, ಮೈಸೂರು ದಸರಾ ಸಂದರ್ಭದಲ್ಲಿ ನಡೆಯಲಿರುವ ಐತಿಹಾಸಿಕ ಕಂಬಳವನ್ನು ಅತ್ಯಂತ ಶಿಸ್ತುಬದ್ಧ ಹಾಗೂ ಯಶಸ್ವಿಯಾಗಿ ಆಯೋಜಿಸುವಂತೆ ಸಲಹೆ ನೀಡಿದ ಅವರು, ಮೈಸೂರಿನ ಜನತೆಯ ವಿಶ್ವಾಸಕ್ಕೆ ಪಾತ್ರವಾಗುವ ರೀತಿಯಲ್ಲಿ ಪಂದ್ಯಾವಳಿ ನಡೆಸಬೇಕು ಎಂದು ಸೂಚಿಸಿದರು.

ಕಂಬಳಕ್ಕೆ ರಾಜ್ಯ ಮಾನ್ಯತೆ ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಕಂಬಳ ಅಸೋಸಿಯೇಷನ್‌ ವತಿಯಿಂದ ಡಿ.ಕೆ. ಶಿವಕುಮಾರ್‌ ಅವರನ್ನು ಈ ಸಂದರ್ಭದಲ್ಲಿ ವಿಶೇಷವಾಗಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಹಕಾರ ಸಚಿವ ಲಕ್ಷ್ಮಣ ಸವದಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ. ದೇವೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ