ಧರ್ಮಸ್ಥಳ : ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ವತಿಯಿಂದ ಆಯೋಜಿಸಲಾಗಿದ್ದ ೧೭ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಅತ್ಯಂತ ಭಕ್ತಿ, ಸಂಭ್ರಮ ಹಾಗೂ ಶ್ರದ್ಧಾಪೂರ್ವಕವಾಗಿ ಜರುಗಿತು. ಈ ಧಾರ್ಮಿಕ ಸಮಾರಂಭವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ. ವಿ. ಶೆಟ್ಟಿ ಹಾಗೂ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದ ಪಾರುಪತ್ಯಗಾರ್ ಲಕ್ಷ್ಮೀನಾರಾಯಣ ರಾವ್ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎ. ವಿ. ಶೆಟ್ಟಿ ಅವರು, ಶ್ರೀಕೃಷ್ಣನ ದಿವ್ಯ ಜೀವನ ಹಾಗೂ ಸಂದೇಶಗಳು ಇಂದಿನ ಆಧುನಿಕ ಸಮಾಜಕ್ಕೂ ಉತ್ತಮ ಮಾರ್ಗದರ್ಶಕವಾಗಿವೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಮಾಜದಲ್ಲಿ ಸಂಸ್ಕಾರ, ಸಾಮರಸ್ಯ ಮತ್ತು ಪರಸ್ಪರ ಬಾಂಧವ್ಯವನ್ನು ವೃದ್ಧಿಸುತ್ತವೆ. ಇಂತಹ ಸತ್ಕಾರ್ಯಗಳನ್ನು ನಿರಂತರವಾಗಿ ಆಯೋಜಿಸುತ್ತಿರುವ ಕಿನ್ನಿಗೋಳಿ ಕಂಚಿಮಾರು ಪೂಜಾ ಸಮಿತಿಯ ಸೇವೆ ಶ್ಲಾಘನೀಯ ಎಂದು ಪ್ರಶಂಸಿಸಿದರು.
ಬಳಿಕ ಲಕ್ಷ್ಮೀನಾರಾಯಣ ರಾವ್ ಅವರು ಮಾತನಾಡಿ, ಶ್ರೀಕೃಷ್ಣ ಜನ್ಮಾಷ್ಟಮಿಯು ಕೇವಲ ಧಾರ್ಮಿಕ ಆಚರಣೆಯಾಗಿರದೆ ನಮ್ಮ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಸಂದರ್ಭವಾಗಿದೆ. ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸುವುದರಿಂದ ಸಮಾಜದಲ್ಲಿ ಸೌಹಾರ್ದತೆ ಮತ್ತು ಸದ್ಭಾವನೆ ಹೆಚ್ಚಾಗುತ್ತದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ವಕೀಲ ಕೇಶವ, ಪ್ರಕಾಶ್ ಹೆಗ್ಡೆ, ವಿಶ್ವನಾಥ, ರಾಜಶೇಖರ್, ಸಂದೇಶ್ ಸೇರಿದಂತೆ ಹಲವಾರು ಗಣ್ಯರು, ಪೂಜಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಅಪಾರ ಸಂಖ್ಯೆಯ ಭಕ್ತಾದಿಗಳು ಉಪಸ್ಥಿತರಿದ್ದರು.