image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ!

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿರುದ್ಧದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಜಾ!

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ವಿರುದ್ಧ ರಂಜನ್ ರಾವ್ ಯರ್ಡೂರು ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ದೇಶದ ಸರ್ವೋಚ್ಛ ನ್ಯಾಯಾಲಯವಾದ ಸುಪ್ರೀಂ ಕೋರ್ಟ್ ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಈ ಮೂಲಕ ಸಂಸ್ಥೆಯ ವಿರುದ್ಧ ಮಾಡಲಾಗಿದ್ದ ಆಧಾರರಹಿತ ಆರೋಪಗಳಿಗೆ ತೆರೆಬಿದ್ದಿದ್ದು, ಸುಪ್ರೀಂ ಕೋರ್ಟ್ ನೀಡಿದ ಈ ಆದೇಶವು ಐತಿಹಾಸಿಕ ತೀರ್ಪಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಅವರು ಬೆಳ್ತಂಗಡಿಯ ಪ್ರಥಮ ದರ್ಜೆ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಮಾನ್ಯ ನ್ಯಾಯಾಲಯವು ಈ ಅರ್ಜಿಯನ್ನು ತಿರಸ್ಕರಿಸಿದಾಗ, ದೂರುದಾರರು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಪರಿಷ್ಕರಣಾ ದಾವೆ ಹೂಡಿದ್ದರು. ಈ ವಿಚಾರವಾಗಿ ಗ್ರಾಮಾಭಿವೃದ್ಧಿ ಯೋಜನೆಯು ಕರ್ನಾಟಕದ ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಅರ್ಜಿಯನ್ನು (CRL.P) ಸಲ್ಲಿಸಿತ್ತು.

ಉಚ್ಚ ನ್ಯಾಯಾಲಯದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ರಾಜ್ಯದ ಹೆಸರಾಂತ ನ್ಯಾಯವಾದಿಗಳಾದ ಶ್ರೀ ಪಿ.ಪಿ. ಹೆಗ್ಡೆ ಅವರು ವಾದ ಮಂಡಿಸಿದ್ದರು. ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಚಾರಿಟೇಬಲ್ ಟ್ರಸ್ಟ್ ಮೂಲಕ ನಡೆಸುತ್ತಿರುವ ಈ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳನ್ನು ರಚಿಸಿ, ಬ್ಯಾಂಕುಗಳಿಂದ ಸಾಲ ಸೌಲಭ್ಯ ದೊರಕಿಸಿಕೊಡುವ ಆರ್ಥಿಕ ಸೇರ್ಪಡೆ ಕಾರ್ಯ ಮಾಡುತ್ತಿದೆ ಎಂದು ವಿವರಿಸಿದ್ದರು. ಸಂಸ್ಥೆಯ ಸಮಾಜ ಸೇವೆಯ ಯಶಸ್ಸನ್ನು ಸಹಿಸದ ದೂರುದಾರರು ದುರುದ್ದೇಶದಿಂದ ನಿರಂತರವಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂಬುದನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಾಗಿತ್ತು. ವಿಚಾರಣೆ ನಡೆಸಿದ್ದ ಉಚ್ಚ ನ್ಯಾಯಾಲಯವು ಯೋಜನೆಯ ಅರ್ಜಿಯನ್ನು ಪುರಸ್ಕರಿಸಿ, ಕೆಳ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತ್ತು.

ಉಚ್ಚ ನ್ಯಾಯಾಲಯದ ಈ ತೀರ್ಪನ್ನು ಪ್ರಶ್ನಿಸಿ ದೂರುದಾರ ರಂಜನ್ ರಾವ್ ಯರ್ಡೂರು ಅವರು 2026ರ ಏಪ್ರಿಲ್ 23 ರಂದು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ (ಕೇಸ್ ನಂಬ್ರ: SPL 010752/2026) ಸಲ್ಲಿಸಿದ್ದರು. 2026ರ ಸೆಪ್ಟೆಂಬರ್ 8 ರಂದು ಈ ಅರ್ಜಿಯ ವಿಚಾರಣೆ ನಡೆಸಿದ ಭಾರತದ ಸರ್ವೋಚ್ಛ ನ್ಯಾಯಾಲಯವು, ದೂರುದಾರರ ಆರೋಪಗಳು ಆಧಾರರಹಿತವಾಗಿರುವುದನ್ನು ಕಂಡು ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಸುಪ್ರೀಂ ಕೋರ್ಟ್‌ನಲ್ಲೂ ಗ್ರಾಮಾಭಿವೃದ್ಧಿ ಯೋಜನೆಯ ಪರವಾಗಿ ಶ್ರೀ ಪಿ.ಪಿ. ಹೆಗ್ಡೆ ಅವರೇ ವಾದ ಮಂಡಿಸಿ ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ