ಮಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಮಂಗಳೂರಿನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಘೋಷಣೆ ಮಾಡಬೇಕು ಎಂದು ಅಖಿಲ ಭಾರತ ತುಳು ಒಕ್ಕೂಟ ಆಗ್ರಹಿಸಿದೆ.
ಈ ಮೂಲಕ ತುಳುನಾಡಿನ ಸಂಸ್ಕೃತಿ, ಅಸ್ಮಿತೆ ಹಾಗೂ ಭಾಷಾ ಪರಂಪರೆಯನ್ನು ಎತ್ತಿಹಿಡಿಯುವ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕು. ಈ ನಿಟ್ಟಿನಲ್ಲಿ ಕರಾವಳಿಯ ಎಲ್ಲ ಜನಪ್ರತಿನಿಧಿಗಳು ಒಕ್ಕೊರಲಿನಿಂದ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒಕ್ಕೂಟ ಮನವಿ ಮಾಡಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ಈ ಹಿಂದೆ ಉಡುಪಿಯಲ್ಲಿ ನಡೆದ ವಿಶ್ವ ತುಳು ಸಮ್ಮೇಳನದ ನಿರ್ಣಯಗಳು, ವಿವಿಧ ಸಂಘ-ಸಂಸ್ಥೆಗಳು ಸಲ್ಲಿಸಿರುವ ಮನವಿಗಳು ಹಾಗೂ ಡಾ. ಎಂ. ಮೋಹನ್ ಆಳ್ವ ನೇತೃತ್ವದ ಸಮಿತಿ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಕುರಿತು ಒತ್ತಾಯಿಸಲಾಗಿದೆ. ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತು ಈಗಾಗಲೇ ಅಗತ್ಯ ಮಾಹಿತಿಗಳನ್ನು ಸರ್ಕಾರಕ್ಕೆ ಒದಗಿಸಲಾಗಿದೆ. ಶಾಸಕರು ಹಾಗೂ ಸಂಸದರು ವಿಧಾನಸಭೆ ಮತ್ತು ಸಂಸತ್ತಿನಲ್ಲೂ ಈ ವಿಚಾರದ ಬಗ್ಗೆ ಧ್ವನಿ ಎತ್ತುತ್ತಾ ಬಂದಿದ್ದಾರೆ. ಇದೀಗ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ತುಳುವಿಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ಮಹತ್ವದ ನಿರ್ಧಾರ ಕೈಗೊಳ್ಳಲು ಇದು ಸೂಕ್ತ ಸಂದರ್ಭವಾಗಿದೆ.
ಪತ್ರಿಕಾಗೋಷ್ಟಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಎ.ಎ. ಪೂಜಾರಿ, ಉಪಾಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹಾಗೂ ಯೋಗೀಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.