ಮಂಗಳೂರು: ಅಂತಾರಾಷ್ಟ್ರೀಯ ಲಯನ್ಸ್ ಜಿಲ್ಲೆ 317 ಡಿ ಹಾಗೂ ತಪಸ್ಯ ಫೌಂಡೇಶನ್ ವತಿಯಿಂದ ಕೆಎಂಸಿ ಆಸ್ಪತ್ರೆ, ಯೆನೋಪೊಯ ಮೆಡಿಕಲ್ ಕಾಲೇಜು, ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿ ಹಾಗೂ ಎ.ಜೆ. ಆಸ್ಪತ್ರೆಯ ಸಹಯೋಗದಲ್ಲಿ ಮಕ್ಕಳ ಕ್ಯಾನ್ಸರ್ ಕುರಿತು ಮಾಹಿತಿ ಶಿಬಿರ ‘ಶೌರ್ಯ’ ಸೆ.10ರಂದು ಮಂಗಳೂರಿನ ಟೌನ್‌ಹಾಲ್‌ನಲ್ಲಿ ನಡೆಯಲಿದೆ ಎಂದು ತಪಸ್ಯ ಫೌಂಡೇಶನ್‌ನ ವ್ಯವಸ್ಥಾಪನಾ ಟ್ರಸ್ಟಿ ಹಾಗೂ ಲಯನ್ಸ್ ಜಿಲ್ಲೆ 317 ಡಿಯ ಮುಖ್ಯ ಸಂಯೋಜಕಿ ಸಬಿತಾ ಶೆಟ್ಟಿ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು, ರೋಗದ ಆರಂಭಿಕ ಹಂತದಲ್ಲೇ ಪತ್ತೆಹಚ್ಚುವಿಕೆ ಹಾಗೂ ಅಗತ್ಯ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡುವುದು ಶಿಬಿರದ ಪ್ರಮುಖ ಉದ್ದೇಶವಾಗಿದೆ ಎಂದರು.
ಕರ್ನಾಟಕ ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಯು.ಟಿ. ಖಾದರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಲಯನ್ಸ್ ಜಿಲ್ಲೆ 317 ಡಿಯ ಜಿಲ್ಲಾ ರಾಜ್ಯಪಾಲ ಲಯನ್ ಎಚ್.ಎಂ. ತಾರನಾಥ್, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ, ಕನಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಸ್ಥಾಪಕ ಅಧ್ಯಕ್ಷ ಡಾ. ಹಾಜಿ ಯು.ಕೆ. ಮೋನು ಹಾಗೂ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ವೈದ್ಯಕೀಯ ನಿರ್ದೇಶಕ ಡಾ. ಪ್ರಶಾಂತ್ ಮಾರ್ಲ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದರು.