ಮಂಗಳೂರು: ಸೆಪ್ಟೆಂಬರ್ 18 ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳ ರಸ್ತೆ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿ, ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಕ್ಷೇತ್ರಗಳ ವಿಸ್ತರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಕೈಗಾರಿಕೆ ಮತ್ತು ಮೀನುಗಾರಿಕಾ ಸಂಘಟನೆಗಳ ಪ್ರತಿನಿಧಿಗಳು, ಪ್ರವಾಸೋದ್ಯಮ ಕ್ಷೇತ್ರದ ಉದ್ಯಮಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಎದುರಾಗಿರುವ ಜಮೀನುಗಳ ಕೊರತೆಯನ್ನು ನೀಗಿಸಲು ಹೊಸ ಕೈಗಾರಿಕಾ ಪ್ರದೇಶಗಳ ನಿರ್ಮಾಣಕ್ಕೆ ಸರ್ಕಾರ ಗಮನಹರಿಸಲಿದೆ. ಬೈಕಂಪಾಡಿ ಕೈಗಾರಿಕಾ ಪ್ರದೇಶದ ರಸ್ತೆ ಅಭಿವೃದ್ಧಿಗೆ ಈಗಾಗಲೇ 28 ಕೋಟಿ ರೂ. ವೆಚ್ಚದ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು, ಅಲ್ಲಿಗೆ ಆಗಮಿಸುವ ಅಪ್ರೆಂಟಿಸ್‌ಗಳ ವಸತಿ ಅನುಕೂಲಕ್ಕಾಗಿ ಸಮೀಪದಲ್ಲೇ ವಸತಿಗೃಹ ನಿರ್ಮಿಸುವ ಪ್ರಸ್ತಾವನೆ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಮೀನುಗಾರ ಮುಖಂಡರಾದ ಚೇತನ್ ಮತ್ತು ಮೋಹನ್ ಬೆಂಗ್ರೆ ಅವರು ನಗರದ ಹಳೆ ಬಂದರು ಧಕ್ಕೆಯಲ್ಲಿ ಬೋಟ್‌ಗಳು ತಂಗಲು ಎದುರಾಗಿರುವ ಜಾಗದ ಸಮಸ್ಯೆಯನ್ನು ಸಚಿವರ ಗಮನಕ್ಕೆ ತಂದರು. ಕಸಬಾ ಬೆಂಗ್ರೆ, ಹೊಸಬೆಟ್ಟು, ತಣ್ಣೀರುಬಾವಿ ಹಾಗೂ ಕೋಟೆಪುರಗಳಲ್ಲಿ ಹೊಸ ಮೀನುಗಾರಿಕಾ ಜೆಟ್ಟಿ ಸ್ಥಾಪನೆ ಮತ್ತು ನದಿಯ ಹೂಳೆತ್ತುವ ಡ್ರೆಜ್ಜಿಂಗ್ ಕಾಮಗಾರಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ನವ ಮಂಗಳೂರು ಬಂದರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 150 ಎಕರೆ ಜಾಗವನ್ನು ಬಳಸಿಕೊಂಡು ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಕುರಿತು ಎನ್‌ಎಂಪಿಎ ಜೊತೆ ಚರ್ಚಿಸಲಾಗಿದೆ ಎಂದರು. ಹಳೆ ಜಿಲ್ಲಾಧಿಕಾರಿ ಕಚೇರಿ ಅಭಿವೃದ್ಧಿ, ಆನೆ ಶಿಬಿರ, ಸಿ.ಆರ್.ಝೆಡ್ ನಿಯಮ ಪರಿಷ್ಕರಣೆ ಹಾಗೂ ಕರಾವಳಿ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.
ಇದಲ್ಲದೆ, ತೊಕ್ಕೊಟ್ಟು-ಮುಡಿಪು-ಮೆಲ್ಕಾರ್ ರಸ್ತೆಯನ್ನು ಶಿಕ್ಷಣ, ಆರೋಗ್ಯ, ಧಾರ್ಮಿಕ ಹಾಗೂ ಐಟಿ ಕಾರಿಡಾರ್ ಆಗಿ ಮೇಲ್ದರ್ಜೆಗೇರಿಸಿ, ಬೆಂಗಳೂರು ಮತ್ತು ಕೇರಳ ಸಂಪರ್ಕಿಸುವ ಪ್ರಮುಖ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಸಮಗ್ರ ಪ್ರಸ್ತಾವನೆ ಸಿದ್ಧಪಡಿಸಲು ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.