image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಯುವಜನರು ಪ್ರಜಾಪ್ರಭುತ್ವದ ಮಹತ್ವ ಅರಿತು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ಸಚಿವ ಯು.ಟಿ. ಖಾದರ್

ಯುವಜನರು ಪ್ರಜಾಪ್ರಭುತ್ವದ ಮಹತ್ವ ಅರಿತು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು: ಸಚಿವ ಯು.ಟಿ. ಖಾದರ್

ಮಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯು ಸಹಬಾಳ್ವೆ ಮತ್ತು ಸಮಾನ ಅವಕಾಶಗಳ ಆಶಯವನ್ನು ಹೊಂದಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಉನ್ನತ ಸ್ಥಾನಕ್ಕೆ ತಲುಪಲು ಅವಕಾಶ ಕಲ್ಪಿಸುವುದೇ ಇದರ ಮೂಲ ಉದ್ದೇಶವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ‘ಯುವ ಸಂಸತ್ತು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕೇವಲ ಪಠ್ಯ ಶಿಕ್ಷಣಕ್ಕಷ್ಟೇ ಸೀಮಿತವಾಗದೆ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ತಿಳಿದುಕೊಳ್ಳಬೇಕು. ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರಂತಹ ಮಹನೀಯರ ಜೀವನ ಚರಿತ್ರೆಯನ್ನು ಓದುವ ಮೂಲಕ ಯುವಜನತೆ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು. ಇಂತಹ ವಿಚಾರಪೂರ್ಣ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಭವ್ಯ ಭಾರತದ ಜವಾಬ್ದಾರಿಯುತ ಸತ್ಪ್ರಜೆಗಳಾಗಬೇಕು ಎಂದು ಅವರು ಕರೆ ನೀಡಿದರು.

ಭಾರತದ ಸಂವಿಧಾನವು ಇಡೀ ವಿಶ್ವದಲ್ಲೇ ಅತ್ಯಂತ ವಿಶಿಷ್ಟವಾದದ್ದು. ಸಮಾಜದಲ್ಲಿ ಪ್ರತಿಯೊಬ್ಬ ನಾಗರಿಕನೂ ನಿರ್ಭಯವಾಗಿ ಬದುಕಲು ಹಾಗೂ ತನ್ನ ಮೂಲಭೂತ ಹಕ್ಕುಗಳನ್ನು ಅನುಭವಿಸಲು ಸಂವಿಧಾನ ನೀಡಿದ ಭದ್ರತೆಯೇ ಪ್ರಮುಖ ಕಾರಣವಾಗಿದೆ. ಸರ್ಕಾರದ ಯೋಜನೆಗಳು ಹಾಗೂ ಸವಲತ್ತುಗಳು ಯಾವುದೇ ತಾರತಮ್ಯವಿಲ್ಲದೆ, ಅರ್ಹತೆಗೆ ಅನುಗುಣವಾಗಿ ಪ್ರತಿಯೊಬ್ಬರಿಗೂ ತಲುಪುವ ನ್ಯಾಯಯುತ ವ್ಯವಸ್ಥೆಯನ್ನು ಪ್ರಜಾಪ್ರಭುತ್ವ ಕಲ್ಪಿಸಿದೆ. ಈ ವ್ಯವಸ್ಥೆಯ ಬಲವರ್ಧನೆಗೆ ಮತದಾನದ ಹಕ್ಕು ಪ್ರಮುಖ ಆಧಾರವಾಗಿದ್ದು, ಪ್ರತಿಯೊಬ್ಬರೂ ಇದನ್ನು ಜವಾಬ್ದಾರಿಯಿಂದ ಚಲಾಯಿಸುವುದು ನಾಗರಿಕ ಕರ್ತವ್ಯವಾಗಿದೆ ಎಂದು ಸಚಿವರು ಪ್ರತಿಪಾದಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಪ್ರೊಬೆಶನರಿ ಐ.ಎ.ಎಸ್ ಅಧಿಕಾರಿ ಅರ್ಚಿತ್ ಡೊಂಗ್ರೆ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಸೈಮನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್. ಹೇಮಲತಾ ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸುರೇಶ್ ಅಡಿಗ ವಂದಿಸಿದರು.

Category
ಕರಾವಳಿ ತರಂಗಿಣಿ