ಮಂಗಳೂರು : ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದ ಯುವ ಪೀಳಿಗೆಯ ನಿರುದ್ಯೋಗ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಕರ್ನಾಟಕ ಜೋಗಿ ಸಮಾಜ ಸುಧಾರಕ ಸಂಘದ (ರಿ) ವತಿಯಿಂದ ಬರುವ ಸೆಪ್ಟೆಂಬರ್ 20, 2026 ರಂದು 'ಕುಡ್ಲ ಉದ್ಯೋಗ ಮೇಳ 2026' ಅನ್ನು ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿ ಶ್ರೀ ಯೋಗಿ ವರದರಾಜ್ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಕಳೆದ 56 ವರ್ಷಗಳಿಂದ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಈ ಸಂಸ್ಥೆಯು ಉದ್ಯೋಗಾಕಾಂಕ್ಷಿಗಳನ್ನು ಮತ್ತು ಉದ್ಯೋಗದಾತರನ್ನು ಒಂದೇ ವೇದಿಕೆಯಲ್ಲಿ ಜೋಡಿಸುವ ಶ್ರೇಷ್ಠ ಕಾರ್ಯಕ್ಕೆ ಮುಂದಾಗಿದೆ ಎಂದರು.
ಈ ಉದ್ಯೋಗ ಮೇಳವು ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿರದೆ, ತಮ್ಮ ಶಿಕ್ಷಣವನ್ನು ಪೂರ್ಣಗೊಳಿಸಿರುವ ಪ್ರತಿಯೊಬ್ಬ ಅರ್ಹ ಅಭ್ಯರ್ಥಿಗೂ ಸಂಪೂರ್ಣ ಉಚಿತವಾಗಿ ತೆರೆದಿರುತ್ತದೆ. ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆನ್‌ಲೈನ್ ಲಿಂಕ್ ಮೂಲಕ ನೋಂದಾಯಿಸಿಕೊಳ್ಳಲು ಅವಕಾಶ ನೀಡಲಾಗಿದ್ದು, ಈಗಾಗಲೇ 750ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇನ್ನು ಹೆಚ್ಚಿನ ಉದ್ಯೋಗಾಕಾಂಕ್ಷಿಗಳು ಈ ಅವಕಾಶದ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಪ್ರಸ್ತುತ ದೇಶದ ವಿವಿಧ ರಂಗಗಳ ಸುಮಾರು 40ಕ್ಕೂ ಹೆಚ್ಚು ಪ್ರಮುಖ ಉದ್ಯೋಗದಾತ ಸಂಸ್ಥೆಗಳು/ಕಂಪನಿಗಳು ಭಾಗವಹಿಸಲು ಸಮ್ಮತಿಸಿದ್ದು, ವಿಭಿನ್ನ ಕ್ಷೇತ್ರಗಳಲ್ಲಿ ಒಟ್ಟು 850ಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಲಭ್ಯವಿವೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಉದ್ಯೋಗದಾತರು ಈ ಮೇಳಕ್ಕೆ ಕೈಜೋಡಿಸುವ ನಿರೀಕ್ಷೆಯಿದೆ ಎಂದರು.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅದ್ಯಕ್ಷ ಶ್ರೀ ಕಿರಣ್ ಕುಮಾರ್ ಜೋಗಿ, ಜೊತೆ ಕಾರ್ಯದರ್ಶಿ ಶ್ರೀಮತಿ ಸುನಂದಾ ಸುರೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ಹರೀಶ್ ಕುಮಾರ್ ಜೋಗಿ ಹಾಗೂ ಕೋಶಾಧಿಕಾರಿ ಶ್ರೀ ಎಲ್. ಯಶವಂತ್ ಕುಮಾರ್ ಉಪಸ್ಥಿತರಿದ್ದರು.