ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳಲಾಗಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ, ಅರ್ಹ ನಾಗರಿಕರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಾಗೂ ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಸೆಪ್ಟೆಂಬರ್ 19 ಮತ್ತು 20 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.
ಇದುವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳದ ಅರ್ಹ ನಾಗರಿಕರು ಹಾಗೂ 18 ವರ್ಷ ಪೂರೈಸಿರುವ ಯುವ ಮತದಾರರಿಗೆ ಹೆಸರು ಸೇರ್ಪಡೆಗೊಳಿಸಲು ಈ ಅಭಿಯಾನವು ಉತ್ತಮ ಅವಕಾಶವಾಗಿದೆ. ನಿಗದಿತ ದಿನಗಳಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿ.ಎಲ್.ಒ) ಹಾಗೂ ಚುನಾವಣಾ ಸಿಬ್ಬಂದಿ ಉಪಸ್ಥಿತರಿದ್ದು, ಸಾರ್ವಜನಿಕರಿಗೆ ಅಗತ್ಯ ಮಾರ್ಗದರ್ಶನ ಹಾಗೂ ಮಾಹಿತಿ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಹೊಸ ಹೆಸರು ಸೇರ್ಪಡೆ, ವಿವರಗಳ ತಿದ್ದುಪಡಿ ಹಾಗೂ ಇತರ ಸಂಬಂಧಿತ ಸೇವೆಗಳಿಗೆ ಅಗತ್ಯ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ನಾಗರಿಕರು ಹಾಗೂ ಯುವ ಮತದಾರರು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ಮತಗಟ್ಟೆಗಳಿಗೆ ಭೇಟಿ ನೀಡಿ ಈ ವಿಶೇಷ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.