image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಮಾನ್ಯತೆ: ಸರ್ಕಾರದ ನಿರ್ಧಾರಕ್ಕೆ ತುಳು ಅಕಾಡೆಮಿ ಹರ್ಷ

ತುಳು ಭಾಷೆಗೆ ರಾಜ್ಯದ ಎರಡನೇ ಅಧಿಕೃತ ಭಾಷೆ ಮಾನ್ಯತೆ: ಸರ್ಕಾರದ ನಿರ್ಧಾರಕ್ಕೆ ತುಳು ಅಕಾಡೆಮಿ ಹರ್ಷ

ಮಂಗಳೂರು: ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಆಡಳಿತ ಭಾಷೆಯೆಂದು ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದ ಕರ್ನಾಟಕ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಕೃತಜ್ಞತೆ ಸಲ್ಲಿಸಿದೆ. ಸರ್ಕಾರವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ನಡೆದುಕೊಂಡಿದ್ದು, ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿರುವುದು ಸಂತಸ ತಂದಿದೆ ಎಂದು ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.

ಈ ಐತಿಹಾಸಿಕ ನಿರ್ಧಾರಕ್ಕೆ ಕಾರಣಕರ್ತರಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ರೈ, ಕರಾವಳಿಯ ಎಲ್ಲಾ ಶಾಸಕರು ಹಾಗೂ ದೇಶ-ವಿದೇಶಗಳ ತುಳು ಸಂಘ-ಸಂಸ್ಥೆಗಳಿಗೆ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಸುಮಾರು ಮೂರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ತುಳು ಭಾಷೆಯ ಸಮಗ್ರ ಬೆಳವಣಿಗೆಗೆ ಇದೊಂದು ಚಾರಿತ್ರಿಕ ಹೆಜ್ಜೆಯಾಗಿದ್ದು, ಪ್ರಪಂಚದಾದ್ಯಂತ ಇರುವ ತುಳು ಭಾಷಿಕರಲ್ಲಿ ಆತ್ಮವಿಶ್ವಾಸ ಮತ್ತು ಹೆಮ್ಮೆಯನ್ನು ಹೆಚ್ಚಿಸಿದೆ ಎಂದು ಅವರು ಹೇಳಿದ್ದಾರೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ಡಾ. ಎಂ. ಮೋಹನ್ ಆಳ್ವ ಅವರು ಸಲ್ಲಿಸಿದ್ದ ವರದಿ ಹಾಗೂ ನಂತರ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ರಚನೆಯಾದ ಆಂಧ್ರಪ್ರದೇಶ ಅಧ್ಯಯನ ಸಮಿತಿಯ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಆಂಧ್ರಪ್ರದೇಶ ಅಧ್ಯಯನ ಸಮಿತಿಯ ಸದಸ್ಯರಾಗಿ ಉರ್ದು ಭಾಷೆಯನ್ನು ಅಧಿಕೃತಗೊಳಿಸಿದ ಕಾನೂನು ಪ್ರಕ್ರಿಯೆಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದರು. ಸರ್ಕಾರದ ಈ ನಿರ್ಧಾರವು ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಬೇಡಿಕೆಗೆ ಮತ್ತಷ್ಟು ಪೂರಕ ಬಲವನ್ನು ನೀಡಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Category
ಕರಾವಳಿ ತರಂಗಿಣಿ