image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಾವಳಿ ಮೀನುಗಾರರ ಸಂಕಷ್ಟಗಳಿಗೆ ಸ್ಪಂದಿಸಿದ ಸಿಎಂ ಡಿ.ಕೆ. ಶಿವಕುಮಾರ್: ಮುಂಜಾನೆ ಅನಿರೀಕ್ಷಿತ ಧಕ್ಕೆ ಭೇಟಿ

ಕರಾವಳಿ ಮೀನುಗಾರರ ಸಂಕಷ್ಟಗಳಿಗೆ ಸ್ಪಂದಿಸಿದ ಸಿಎಂ ಡಿ.ಕೆ. ಶಿವಕುಮಾರ್: ಮುಂಜಾನೆ ಅನಿರೀಕ್ಷಿತ ಧಕ್ಕೆ ಭೇಟಿ

ಮಂಗಳೂರು: ಕರಾವಳಿ ಭಾಗದ ಮೀನುಗಾರರು, ಮೀನು ಮಾರಾಟಗಾರರು ಮತ್ತು ವರ್ತಕರ ಸಮಸ್ಯೆಗಳನ್ನು ನೇರವಾಗಿ ಆಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು  ಮುಂಜಾನೆ  ಮಂಗಳೂರಿನ ಮೀನುಗಾರಿಕಾ ಧಕ್ಕೆಗೆ (ಹಳೆ ಬಂದರು - Old Port) ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಳೆಯ ಬಂದರಿನಲ್ಲಿ ಹೂಳು ಎತ್ತುವ (Dredging) ಕಾರ್ಯ ಸರಿಯಾಗಿ ನಡೆಯದ ಕಾರಣ ಬೋಟ್ ಗಳು ಅಪಘಾತಕ್ಕೀಡಾಗುತ್ತಿರುವುದು ಮತ್ತು ಮೂಲಭೂತ ಸೌಕರ್ಯಗಳ ಕೊರತೆಯ ಬಗ್ಗೆ ಅಸೋಸಿಯೇಷನ್ ಹಾಗೂ ಮೀನುಗಾರರು ಸಿಎಂ ಅವರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರದಲ್ಲೇ ಶಾಶ್ವತ ಪರಿಹಾರ ಕಲ್ಪಿಸುವುದಾಗಿ ಹಾಗೂ ಶೌಚಾಲಯ ಮತ್ತು ತುರ್ತು ಚಿಕಿತ್ಸಾ ವ್ಯವಸ್ಥೆಯನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಅಲ್ಲದೆ, ಸಿಎಂ ಭೇಟಿಯ ಹಿನ್ನೆಲೆಯಲ್ಲಿ ವ್ಯಾಪಾರ-ವಹಿವಾಟು ಸ್ಥಗಿತಗೊಳಿಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಇದಕ್ಕೆ ಕಾರಣರಾದ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಕಸ್ತೂರಿ ರಂಗನ್ ವರದಿ ಕುರಿತು ಮಾತನಾಡಿ, ಈ ವಿಚಾರದಲ್ಲಿ ಕರಾವಳಿಯ ಜನರಿಗೆ ಅನ್ಯಾಯವಾಗುತ್ತಿದ್ದು, ವಾಸ್ತವಿಕ ಪರಿಸ್ಥಿತಿ ತಿಳಿಯಲು ಕ್ಷೇತ್ರ ಭೇಟಿ ನೀಡಿರುವುದಾಗಿ ತಿಳಿಸಿದರು. ಸೋಮವಾರ ವಿಶೇಷ ಅಧಿವೇಶನ ಕರೆಯಲಾಗಿದ್ದು, ಕಾನೂನು ಚೌಕಟ್ಟಿನಲ್ಲಿ ಜನರ ಬದುಕನ್ನು ರಕ್ಷಿಸಲು ಗಟ್ಟಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ವಿರೋಧ ಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿ, ಸರ್ಕಾರ ನುಡಿದಂತೆ ನಡೆಯುವುದಾಗಿ ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ