ಮಂಗಳೂರು: ಪ್ರಕೃತಿಯ ಮಡಿಲಲ್ಲಿ ರೂಪುಗೊಂಡಿರುವ ಆಯುರ್ವೇದ ವೈದ್ಯಕೀಯ ಪದ್ಧತಿಯು ಮಾನವನ ಜೀವನದ ಪ್ರತಿಯೊಂದು ಹಂತದಲ್ಲೂ ಆರೋಗ್ಯಕರ ಜೀವನ ನಡೆಸಲು ಅತ್ಯಂತ ಸಹಕಾರಿಯಾಗಿದೆ. ಪ್ರತಿಯೊಬ್ಬರೂ ಆಯುರ್ವೇದದ ಮಹತ್ವವನ್ನು ತಿಳಿದುಕೊಂಡು, ಅದನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ ತಿಳಿಸಿದ್ದಾರೆ.
ನಗರದ ಕದ್ರಿ ಲಯನ್ಸ್ ಅಶೋಕ ಸೇವಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆಯ ಆಶ್ರಯದಲ್ಲಿ, ವಿವಿಧ ಆಯುಷ್ ಮಹಾವಿದ್ಯಾಲಯಗಳು ಮತ್ತು ಆಯುಷ್ ಸಂಘಟನೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆಯುರ್ವೇದವು ಕೇವಲ ರೋಗ ನಿವಾರಣೆಗೆ ಮಾತ್ರವಲ್ಲದೆ, ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳುವಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ. ಆಯುರ್ವೇದದ ಪ್ರಾಚೀನ ಆರೋಗ್ಯ ಸಂರಕ್ಷಣಾ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವ ಮೂಲಕ ಸದೃಢ ಹಾಗೂ ಆರೋಗ್ಯಕರ ಸಮಾಜವನ್ನು ನಿರ್ಮಿಸಲು ಸಾಧ್ಯವಿದೆ. ರೋಗ ಬಂದ ನಂತರ ಚಿಕಿತ್ಸೆ ಪಡೆಯುವ ಬದಲು, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವ ಕ್ರಮಗಳಿಗೆ ಪ್ರತಿಯೊಬ್ಬರೂ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಜ್ಯ ಕನಿಷ್ಠ ವೇತನಾ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್, ಭಾರತದಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಆಯುರ್ವೇದ ಚಿಕಿತ್ಸಾ ಪದ್ಧತಿಯು ನಿರಂತರವಾಗಿ ರೂಢಿಯಲ್ಲಿದೆ. ಇದು ಪ್ರಕೃತಿ ಮತ್ತು ಮನುಷ್ಯನ ನಡುವಿನ ಅವಿನಾಭಾವ ಸಂಬಂಧವನ್ನು ಆಧರಿಸಿದ ಅನರ್ಘ್ಯ ಆರೋಗ್ಯ ಪದ್ಧತಿಯಾಗಿದೆ. ಇಂದಿನ ಆಧುನಿಕ ಹಾಗೂ ಬದಲಾಗುತ್ತಿರುವ ಯಾಂತ್ರಿಕ ಜೀವನಶೈಲಿಯಿಂದಾಗಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ, ಮನುಷ್ಯನ ದೈನಂದಿನ ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಅರೂಪದ ಆರೋಗ್ಯ ಸಮಸ್ಯೆಗಳಿಗೂ ಆಯುರ್ವೇದದಲ್ಲಿ ಅತ್ಯುತ್ತಮ ಪರಿಹಾರ ದೊರೆಯುತ್ತದೆ ಎಂದರು.
ಇದೇ ವೇಳೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಡಾ. ಜಯಗೋವಿಂದ ಉಕ್ಕಿನಡ್ಕ ಹಾಗೂ ಶಾರದಾ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಸಂದೀಪ್ ಬೇಕಲ್ ಅವರು ಆಯುರ್ವೇದದ ವೈಜ್ಞಾನಿಕ ಹಿನ್ನೆಲೆ ಹಾಗೂ ಜೀವನಶೈಲಿಯಲ್ಲಿ ಅದರ ಪ್ರಮುಖ ಪಾತ್ರದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಶಾಲೆಟ್ ಲವೀನಾ ಪಿಂಟೋ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಲೇಡಿಗೋಶನ್ ಆಸ್ಪತ್ರೆಯ ಅಧೀಕ್ಷಕ ಡಾ. ದುರ್ಗಾಪ್ರಸಾದ್ ಹಾಗೂ ಜಿಲ್ಲಾ ಆಯುಷ್ ಅಧಿಕಾರಿ ಮುರಳೀಧರ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.