image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉನ್ನತ ಶಿಕ್ಷಣದ ಬದಲಾವಣೆಗಳಿಗೆ ಖಾಸಗಿ ಕಾಲೇಜುಗಳು ಒಗ್ಗಟ್ಟಾಗಿ ಸ್ಪಂದಿಸಬೇಕು: ಡಾ. ಎಂ. ಮೋಹನ್ ಆಳ್ವ

ಉನ್ನತ ಶಿಕ್ಷಣದ ಬದಲಾವಣೆಗಳಿಗೆ ಖಾಸಗಿ ಕಾಲೇಜುಗಳು ಒಗ್ಗಟ್ಟಾಗಿ ಸ್ಪಂದಿಸಬೇಕು: ಡಾ. ಎಂ. ಮೋಹನ್ ಆಳ್ವ

ಮೂಡುಬಿದಿರೆ: ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೇಗವಾಗಿ ಸಂಭವಿಸುತ್ತಿರುವ ಬದಲಾವಣೆಗಳಿಗೆ ಅನುಗುಣವಾಗಿ ಖಾಸಗಿ ಕಾಲೇಜುಗಳು ಹೊಸ ಆಲೋಚನೆ, ಪ್ರಯೋಗ ಹಾಗೂ ಶಿಕ್ಷಣ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು. ಜತೆಗೆ, ಸಾಮಾನ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಆಡಳಿತ ಮಂಡಳಿಗಳು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಹಾಗೂ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದರು.

ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ 2026–27ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ, ಕೌಶಲ್ಯಾಧಾರಿತ ಶಿಕ್ಷಣ ಹಾಗೂ ವಿದ್ಯಾರ್ಥಿಗಳ ನಿರೀಕ್ಷೆಗಳಲ್ಲಿ ನಿರಂತರ ಬದಲಾವಣೆಗಳಾಗುತ್ತಿದ್ದು, ಕಾಲೇಜುಗಳು ತಮ್ಮ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವ್ಯವಸ್ಥೆಗಳನ್ನು ಕಾಲಕ್ಕೆ ತಕ್ಕಂತೆ ರೂಪಿಸಿಕೊಳ್ಳುವುದು ಅನಿವಾರ್ಯ ಎಂದರು.

ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಸುಮಾರು 130 ಖಾಸಗಿ ಕಾಲೇಜುಗಳಿದ್ದು, ಹಲವು ಸಂಸ್ಥೆಗಳು ಮೂಲಸೌಕರ್ಯ ಹಾಗೂ ಆಡಳಿತಾತ್ಮಕ ಸಮಸ್ಯೆಗಳನ್ನು ಎದುರಿಸುತ್ತಿವೆ. ಎಲ್ಲಾ ಕಾಲೇಜುಗಳನ್ನು ಒಂದೇ ವೇದಿಕೆಯಡಿ ತಂದು ಒಟ್ಟಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಂಘಟನೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ನಡುವೆ ಉತ್ತಮ ಸಮನ್ವಯ ಅಗತ್ಯವಿದ್ದು, ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು 2027ರ ಜನವರಿಯಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ ಆಯೋಜಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ಸಂಘಟನೆಯ 2026–27ನೇ ಸಾಲಿನ ಕಾರ್ಯಕಾರಿ ಸಮಿತಿಯ ಹಾಲಿ ಪದಾಧಿಕಾರಿಗಳನ್ನೇ ಮುಂದಿನ ಸಾಲಿಗೂ ಮುಂದುವರಿಸಲು ನಿರ್ಣಯಿಸಲಾಯಿತು. ಸಂಘದ ಉಪಾಧ್ಯಕ್ಷ ದಿನೇಶ್ ಕುಮಾರ್ ಆಳ್ವ, ಕಾರ್ಯದರ್ಶಿ ಡಾ. ಶ್ರೀಪತಿ ಕಲ್ಲುರಾಯ, ಖಜಾಂಚಿ ಟಿ. ರಮೇಶ್ ಸೇರಿದಂತೆ ವಿವಿಧ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ