ಮಂಗಳೂರು: ನಗರದ ಅಶೋಕನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಪ್ರಯುಕ್ತ ಮೂವರು ಗರ್ಭಿಣಿ ಮಹಿಳೆಯರಿಗೆ ಸೀಮಂತ ಕಾರ್ಯಕ್ರಮ ಹಾಗೂ ಇಬ್ಬರು ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮವನ್ನು ನೆರವೇರಿಸಿಕೊಡಲಾಯಿತು.
ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಅಕ್ಕಪಡೆಯ ಹೆಡ್ ಕಾನ್‌ಸ್ಟೇಬಲ್ ಸುಖಲತಾ ಅವರು ಮಹಿಳಾ ದೌರ್ಜನ್ಯ ತಡೆ ಕಾಯ್ದೆ ಹಾಗೂ ಮಹಿಳೆಯರ ಸುರಕ್ಷತೆಯ ಕುರಿತು ಜಾಗೃತಿ ಮೂಡಿಸಿದರು. ಮಂಗಳೂರು ನಗರ ಶಿಶು ಅಭಿವೃದ್ಧಿ ಯೋಜನೆಯ ಊರ್ವಸ್ಟೋರ್ ವಲಯದ ಮೇಲ್ವಿಚಾರಕಿ ಅನುಪಮಾ ಸಿ. ಅವರು ಮಹಿಳೆಯರಿಗೆ ಹಾಗೂ ತಾಯಂದಿರಿಗೆ ಪೌಷ್ಟಿಕ ಆಹಾರದ ಸೇವನೆ ಮತ್ತು ಅದರ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ನಿಕಟಪೂರ್ವ ಮಹಾನಗರ ಪಾಲಿಕೆ ಸದಸ್ಯ ಕೆ. ಚೇತನ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರದಿಂದ ಮಹಿಳೆಯರು ಮತ್ತು ಮಕ್ಕಳಿಗಾಗಿ ದೊರೆಯುವ ವಿವಿಧ ಸವಲತ್ತುಗಳ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಮೀನಾಕ್ಷಿ ಪ್ರಕಾಶ್, ಅಂಗನವಾಡಿ ಶಿಕ್ಷಕಿ ಸುಜಾತಾ ರೈ, ಸಹಾಯಕಿ ಗೌತಮಿ, ನಿವೃತ್ತ ಸಹಾಯಕಿ ವಿಶಾಲಾಕ್ಷಿ, ಸ್ತ್ರೀಶಕ್ತಿ ಗುಂಪಿನ ಅಧ್ಯಕ್ಷೆ ಉಷಾ, ಕಾರ್ಯದರ್ಶಿ ಆರತಿ ವೇಣುಗೋಪಾಲ್, ಭಾನುಮತಿ ಸೇರಿದಂತೆ ಹಲವಾರು ಗಣ್ಯರು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.