image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಐವನ್ ಡಿಸೋಜಾ ಆಗ್ರಹ

ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಐವನ್ ಡಿಸೋಜಾ ಆಗ್ರಹ

ಮಂಗಳೂರು : ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಹಾಗೂ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲು ಆಡಳಿತ ಪಕ್ಷಕ್ಕೆ ಸಹಕರಿಸಿ ಪ್ರಜಾಪ್ರಭುತ್ವದ ಮೇಲಿನ ವಿಶ್ವಾಸಕ್ಕೆ ಧಕ್ಕೆ ತಂದಿರುವ ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜಾ ಆಗ್ರಹಿಸಿದ್ದಾರೆ. ಸಿಇಸಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಅವರನ್ನು ಬಂಧಿಸಿ ಸೂಕ್ತ ತನಿಖೆಗೆ ಒಳಪಡಿಸಬೇಕೆಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಆಯೋಗದ ಉನ್ನತ ಅಧಿಕಾರಿಯ ಮೇಲೆ ಇಂತಹ ಗಂಭೀರ ಆರೋಪ ಬಂದಿರುವುದು ದೇಶದಲ್ಲೇ ಮೊದಲ ಬಾರಿಯಾಗಿದ್ದು, ಇದರಿಂದ ಸಾರ್ವಜನಿಕರು ಚುನಾವಣಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಕಳೆದುಕೊಳ್ಳುವಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಅಕ್ರಮಗಳೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಕಾರಣ ಎಂಬುದು ಸಾಬೀತಾಗಿದ್ದು, ಅಕ್ರಮಗಳ ವಿರುದ್ಧ ಸತತ ಹೋರಾಟ ನಡೆಸುತ್ತಿರುವ ರಾಹುಲ್ ಗಾಂಧಿಯವರ ನಿಲುವಿಗೆ ಈಗ ಪುಷ್ಟಿ ದೊರೆತಿದೆ ಎಂದಿದ್ದಾರೆ.

ಈ ಘಟನೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ 2026ರ ಸೆಪ್ಟೆಂಬರ್ 28 (ಸೋಮವಾರ) ರಂದು ಬೆಳಿಗ್ಗೆ 10:00 ಗಂಟೆಗೆ ಪಂಪ್‌ವೆಲ್ ಮಹಾವೀರ ವೃತ್ತದಿಂದ ಪಡೀಲ್‌ನ ಜಿಲ್ಲಾ ಚುನಾವಣಾಧಿಕಾರಿ (ಡಿಸಿ) ಕಚೇರಿಯವರೆಗೆ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನಾ ಸಭೆಯನ್ನು ಆಯೋಜಿಸಲಾಗಿದೆ. ಇದು ಪ್ರಜಾಪ್ರಭುತ್ವ ಮತ್ತು ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕಾಪಾಡುವ ವಿಚಾರವಾದ್ದರಿಂದ ಸಾರ್ವಜನಿಕರು, ಆಟೋ ಮತ್ತು ಟೆಂಪೋ ಚಾಲಕರು ಸೇರಿದಂತೆ ಎಲ್ಲಾ ವರ್ಗದ ಜನರು ಈ ಪಾದಯಾತ್ರೆ ಹಾಗೂ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Category
ಕರಾವಳಿ ತರಂಗಿಣಿ