image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಿಯುಸಿ, ಸಿಎ ಸಾಧಕ ವಿದ್ಯಾರ್ಥಿಗಳಿಗೆ ಆಳ್ವಾಸ್‌ನಲ್ಲಿ ಸನ್ಮಾನ

ಪಿಯುಸಿ, ಸಿಎ ಸಾಧಕ ವಿದ್ಯಾರ್ಥಿಗಳಿಗೆ ಆಳ್ವಾಸ್‌ನಲ್ಲಿ ಸನ್ಮಾನ

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ಸಂಸ್ಥೆಯ ಡಾ. ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ, ಪಿಯುಸಿ, ಸಿಎ ಹಾಗೂ ಸಿಎಸ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ರ‍್ಯಾಂಕ್‌ ಗಳಿಸಿದ ವಿದ್ಯಾರ್ಥಿ ಸಾಧಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ಅಧ್ಯಕ್ಷ ವಿವೇಕ್ ಆಳ್ವ, ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಂಡು ಸ್ಪಷ್ಟ ಗುರಿ, ನಿರಂತರ ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದರು. ಪ್ರತಿಯೊಂದು ಅಂಕದ ಹಿಂದೆ ವಿದ್ಯಾರ್ಥಿಗಳ ಶ್ರಮದ ಜೊತೆಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಸಮರ್ಪಿತ ಸೇವೆಯೂ ಇರುತ್ತದೆ. ಶಿಕ್ಷಣದ ಉದ್ದೇಶ ಕೇವಲ ಅಂಕ ಗಳಿಕೆಗೆ ಸೀಮಿತವಾಗದೆ ಜ್ಞಾನ, ಕೌಶಲ, ಶಿಸ್ತು ಮತ್ತು ಸೃಜನಶೀಲತೆಯ ಮೂಲಕ ಜೀವನದ ಸವಾಲುಗಳನ್ನು ಎದುರಿಸುವುದಾಗಿರಬೇಕು. ವೈಫಲ್ಯ ಎದುರಾದಾಗ ನಿರಾಶರಾಗದೆ ಅದನ್ನು ಮುಂದಿನ ಯಶಸ್ಸಿಗೆ ಪಾಠವನ್ನಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.

ಇದೇ ವೇಳೆ, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ ಮಾತನಾಡಿ, ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದಿಶಾ, ಸಿ.ಎಸ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅನನ್ಯ ಹಾಗೂ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ 15 ವಿದ್ಯಾರ್ಥಿಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ಕಾಲೇಜಿನ ಉಪ ಪ್ರಾಂಶುಪಾಲೆ ಜಾನ್ಸಿ ಪಿ.ಎನ್, ಕಲಾ ವಿಭಾಗದ ಡೀನ್ ವೇಣುಗೋಪಾಲ್ ಶೆಟ್ಟಿ ಹಾಗೂ ಸಾಧಕ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು. ಸಂಖ್ಯಾಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರಭಾತ್ ಎಸ್.ಆರ್ ಸ್ವಾಗತಿಸಿ, ಇಂಗ್ಲಿಷ್ ಉಪನ್ಯಾಸಕ ರಾಜೇಶ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

Category
ಕರಾವಳಿ ತರಂಗಿಣಿ