ಮಂಗಳೂರು : ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಾಮಾಜಿಕವಾಗಿಯೂ ತೊಡಗಿಸಿಕೊಂಡು ರಾಜಕೀಯ ಜ್ಞಾನವನ್ನೂ ಹೆಚ್ಚಿಸಿಕೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ 2026-27ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್ತನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾಯಕನಾದವನು ಯಾವಾಗಲೂ ಇಡೀ ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡಬೇಕೇ ಹೊರತು ವಿಭಜಿಸಬಾರದು. ಹಾಗೆ ಮಾಡಿದರೆ ಆತ ನಾಯಕನಾಗುವ ಅರ್ಹತೆಯನ್ನು ಕಳೆದುಕೊಳ್ಳುತ್ತಾನೆ. ಸಮಾಜದಲ್ಲಿ ಮನುಷ್ಯ-ಮನುಷ್ಯರ ನಡುವೆ ಯಾವುದೇ ಘರ್ಷಣೆಗೆ ಎಡೆಮಾಡಿಕೊಡಬಾರದು. ಬದುಕಿನಲ್ಲಿ ದೊಡ್ಡ ಕನಸನ್ನು ಕಂಡು ಅದನ್ನು ನನಸು ಮಾಡಿಕೊಳ್ಳುವ ನಿಟ್ಟಿನಲ್ಲಿ ಪರಿಶ್ರಮ ಪಡಬೇಕು. ವಿದ್ಯಾರ್ಥಿಗಳು ತಮ್ಮ ಆಲೋಚನೆಯಲ್ಲಿ ವೈವಿಧ್ಯತೆಯನ್ನು ಬೆಳೆಸಿಕೊಳ್ಳುವ ಮೂಲಕ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ನೆರವಾಗಬೇಕು. ಸರ್ಕಾರದ ಯೋಜನೆಗಳನ್ನು ದುರುಪಯೋಗಪಡಿಸಿಕೊಳ್ಳದೆ ಸನ್ಮಾರ್ಗದಲ್ಲಿ ನಡೆಯುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಶಾಖೆಯ ಅಧ್ಯಕ್ಷ ಸಿ. ಎ. ಶಾಂತರಾಮ ಶೆಟ್ಟಿ ಮಾತನಾಡಿ, ವಿದ್ಯಾರ್ಥಿ ಪರಿಷತ್ತು ಬದುಕಿಗೆ ಉತ್ತಮ ಬುನಾದಿ ಹಾಕಿಕೊಡುತ್ತದೆ. ಭವಿಷ್ಯದಲ್ಲಿ ವಿದ್ಯಾರ್ಥಿಗಳು ಸಂಪತ್ತಿನಲ್ಲಿ ಸರಳತೆ, ಅಧಿಕಾರದಲ್ಲಿ ಸೌಮ್ಯತೆ ಹಾಗೂ ಕೋಪದಲ್ಲಿ ಮೌನವನ್ನು ಅಳವಡಿಸಿಕೊಳ್ಳಬೇಕು. ಸರಳ ಸ್ವಭಾವವೇ ನಿಜವಾದ ನಾಯಕತ್ವದ ಗುಣ. ನಾಯಕತ್ವದ ಜೊತೆಗೆ ಶಿಕ್ಷಣ ಹಾಗೂ ಉತ್ತಮ ಆರೋಗ್ಯದ ಕಡೆಗೂ ಗಮನ ನೀಡಬೇಕು. ಬದುಕಿನಲ್ಲಿ ಪರಿಶ್ರಮವಿಲ್ಲದೆ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಮಾನವೀಯತೆಯು ಯಾವುದೇ ಜಾತಿ, ಧರ್ಮ, ಮತವೆಂದು ಭೇದ ಮಾಡುವುದಿಲ್ಲ. ಎಲ್ಲಾ ಅನುಭವಗಳ ಕಣಜವಾಗಿರುವ ಸರ್ಕಾರಿ ಕಾಲೇಜುಗಳಲ್ಲಿ ವ್ಯಕ್ತಿಯ ನಿಜವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಮಾತನಾಡಿ, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕಾಲೇಜಿನ ಹಳೆ ವಿದ್ಯಾರ್ಥಿಗಳು ಇಂದಿನ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ. ಅವರನ್ನು ಅನುಸರಿಸುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ನಿಮ್ಮದೇ ಆಸಕ್ತಿಗಳನ್ನು ಬೆನ್ನಟ್ಟಿ ಪರಿಶ್ರಮದಿಂದ ಸಮಾಜಕ್ಕೆ ಮಾದರಿಯಾಗಬೇಕು. ಬದುಕಿನ ಎಲ್ಲಾ ಏಳು-ಬೀಳುಗಳಲ್ಲೂ ಸಮಚಿತ್ತದಿಂದ ಮುನ್ನಡೆದು ಕಾಲೇಜಿನ ಪ್ರತಿಷ್ಠೆ ಮತ್ತು ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.
ಇದೇ ವೇಳೆ, ವಿದ್ಯಾರ್ಥಿ ಪರಿಷತ್ ಚುನಾವಣೆಯಲ್ಲಿ ಆಯ್ಕೆಯಾದ ಎಲ್ಲಾ ಪ್ರತಿನಿಧಿಗಳಿಗೆ ಪ್ರಾಂಶುಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ತಿನ ಉಪನಿರ್ದೇಶಕರಾದ ಪ್ರೊ. ರಾಮಕೃಷ್ಣ ಬಿ. ಎಂ. ಹಾಗೂ ವಿದ್ಯಾರ್ಥಿ ಪರಿಷತ್ತಿನ ಪದಾಧಿಕಾರಿಗಳು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಶಿಕ್ಷಕ-ರಕ್ಷಕ ಸಂಘದ ಪದಾಧಿಕಾರಿಗಳು ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.