ಕೊಚ್ಚಿ: ಕ್ರೀಡಾ ಪತ್ರಿಕೋದ್ಯಮದಲ್ಲಿ ಕಳೆದ ಮೂರು ದಶಕಗಳಿಂದ ನಿರಂತರ ಸೇವೆ ಸಲ್ಲಿಸುತ್ತಿರುವ ಹಿರಿಯ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಶೂಟರ್‌ಪೇಟೆ ಅವರಿಗೆ 'ಸಾಧಕ ರತ್ನ' ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೇರಳದ ಕೊಚ್ಚಿಯ ಕಲೂರ್‌ನಲ್ಲಿರುವ ಗೋಕುಲಂ ಪಾರ್ಕ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಅದ್ಧೂರಿ 'ಕೇರಳ-ಕರ್ನಾಟಕ ಜಾನಪದ ಉತ್ಸವ'ದ ವೇದಿಕೆಯಲ್ಲಿ ಕೇರಳ ಸರ್ಕಾರದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ವಿ.ಇ. ಅಬ್ದುಲ್ ಗಫೂರು ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕರ್ನಾಟಕ ಜಾನಪದ ಪರಿಷತ್‌ನ ಕೇರಳ ಗಡಿನಾಡ ಘಟಕದ ಜಂಟಿ ಆಶ್ರಯದಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಆರು ಮಂದಿ ಸಾಧಕರನ್ನು ಗುರುತಿಸಿ 'ಸಾಧಕ ರತ್ನ' ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಕ್ರೀಡಾ ಬರಹದ ಮೂಲಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಜಗದೀಶ್ಚಂದ್ರ ಅಂಚನ್ ಅವರು ವಿವಿಧ ದಿನಪತ್ರಿಕೆಗಳಲ್ಲಿ 4,500ಕ್ಕೂ ಅಧಿಕ ಲೇಖನಗಳನ್ನು ಪ್ರಕಟಿಸುವ ಮೂಲಕ ಕ್ರೀಡಾ ಜಗತ್ತಿನ ಮಾಹಿತಿ ಹಾಗೂ ವಿಶ್ಲೇಷಣೆಗಳನ್ನು ಓದುಗರಿಗೆ ತಲುಪಿಸಿದ್ದಾರೆ. ಅವರ ಈ ಅಪಾರ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗಿದೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಎರ್ನಾಕುಲಂ ಶಾಸಕ ಟಿ.ಜೆ. ವಿನೋದ್, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ಅಧ್ಯಕ್ಷ ಪ್ರೊ. ಎಚ್.ಬಿ. ಬೋರಲಿಂಗಯ್ಯ ಹಾಗೂ ಕರ್ನಾಟಕ ಸರ್ಕಾರದ ಕನಿಷ್ಠ ವೇತನ ಆಯೋಗದ ಸದಸ್ಯ ಟಿ.ಎಂ. ಶಾಹೀದ್, ಕಸಾಪ ಕೇರಳ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಕಜಾಪ ಕೇರಳ ಘಟಕದ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಎಸ್. ನಾಸಿ, ಪ್ರಮುಖರಾದ ಅಬ್ದುಲ್ ರಹಮಾನ್, ರವಿ ನಾಯ್ಕಾಪು, ಶಿವರೆಡ್ಡಿ ಬ್ಯಾಡೇಡ್, ಪದ್ಮಶ್ರೀ ಪುರಸ್ಕೃತ ಸತ್ಯನಾರಾಯಣ ಬೆಳೇರಿ ಹಾಗೂ ಲಕ್ಷ್ಮೀ ಮಹೇಶ್ ರಾಜು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.