ಮಂಗಳೂರು: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅಕ್ಟೋಬರ್ 11ರಿಂದ 22ರವರೆಗೆ ಅತ್ಯಂತ ವೈಭವದಿಂದ ಜರುಗಲಿದೆ. ಕ್ಷೇತ್ರದ ನವೀಕರಣದ ರೂವಾರಿ, ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಬಾರಿಯ ಉತ್ಸವ ನಡೆಯಲಿದ್ದು, ಭಕ್ತಿಸಾಗರಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಶ್ರೀ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮರಾಜ್ ಪೂಜಾರಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಕ್ಷೇಷೇತ್ರದ ಭವ್ಯ ದರ್ಬಾರ್ ಹಾಲ್‌ನಲ್ಲಿ ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಮತ್ತು ಆರಾಧನೆ ನಡೆಯಲಿದೆ. ಈ ಬಾರಿ ದರ್ಬಾರ್ ಮಂಟಪವನ್ನು ಆಕರ್ಷಕ ಅರಮನೆ (ಪ್ಯಾಲೇಸ್) ಮಾದರಿಯಲ್ಲಿ ಮನಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ. ಭಕ್ತಿಪೂರ್ಣ ಭಜನೆ, ನೃತ್ಯ-ಸಂಗೀತ ವೈಭವ, ಕ್ರೀಡಾಕೂಟಗಳು ಹಾಗೂ ಸಮೃದ್ಧ ಜಾನಪದ ಕಲಾ ಪ್ರಕಾರಗಳು ಈ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರಲಿವೆ.
ಅಕ್ಟೋಬರ್ 11ರಂದು ವೈದಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿದ್ದು, ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಮತ್ತು ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ. ಅ.12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಂದ ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ ಸಿಗಲಿದೆ. ಕರ್ನಾಟಕದ ವಿವಿಧ ಇಲಾಖೆಗಳ ಸಚಿವರು ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅ.21ರಂದು ಸಂಜೆ 4:00 ಗಂಟೆಗೆ ವಿಶ್ವಖ್ಯಾತ ಮಂಗಳೂರು ದಸರಾ ಮಹೋತ್ಸವದ ಶೋಭಾಯಾತ್ರೆಗೆ ವಿಧ್ಯುಕ್ತ ಚಾಲನೆ ದೊರೆಯಲಿದೆ.
ಅ.12ರಿಂದ 20ರವರೆಗೆ ಪ್ರತಿದಿನವೂ ಬೆಳಗ್ಗೆ 8.30ಕ್ಕೆ ಶ್ರೀಕ್ಷೇತ್ರದಲ್ಲಿ ಚಂಡಿಕಾಹೋಮ ಜರುಗಲಿದೆ. ಅ.17ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ನಡೆಯಲಿದ್ದು, ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಸಾರ್ವಜನಿಕರು ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೇರವಾಗಿ ಪಾಲ್ಗೊಳ್ಳಲು ವಿಶೇಷ ಅವಕಾಶ ಕಲ್ಪಿಸಲಾಗಿದೆ.
ಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಅ.11ರಿಂದ 20ರವರೆಗೆ ನಿತ್ಯ ಮಧ್ಯಾಹ್ನ 2.30ರಿಂದ ರಾತ್ರಿ 11.30ರವರೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಲಾವಿದರಿಂದ ವೈವಿಧ್ಯಮಯ ಸಾಂಸ್ಕೃತಿಕ ರಸದೌತಣವಿರಲಿದೆ. ಇದೇ ವೇದಿಕೆಯಲ್ಲಿ ಪ್ರತಿದಿನವೂ ಸಮಾಜದ ಸಾಧಕ ಮಹಿಳೆಯರಿಗೆ ‘ಅಸಾಮಾನ್ಯ ಸ್ತ್ರೀ’ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.