image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾತ್ರಿ ವೇಳೆ ಹೆದ್ದಾರಿಯಲ್ಲಿ ಮಂಗಳಮುಖಿಯರು ನಿಲ್ಲದಂತೆ ಕ್ರಮಕ್ಕೆ ಡಿಸಿ ಸೂಚನೆ

ರಾತ್ರಿ ವೇಳೆ ಹೆದ್ದಾರಿಯಲ್ಲಿ ಮಂಗಳಮುಖಿಯರು ನಿಲ್ಲದಂತೆ ಕ್ರಮಕ್ಕೆ ಡಿಸಿ ಸೂಚನೆ

ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ನಿಂತು ವಾಹನ ಸವಾರರಿಗೆ ತೊಂದರೆ ನೀಡುವುದನ್ನು ಹಾಗೂ ಅಕ್ರಮ ಚಟುವಟಿಕೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೆದ್ದಾರಿಗಳಲ್ಲಿ ವಾಹನ ಸವಾರರಿಗೆ ತೊಂದರೆಯಾಗದಂತೆ ಆರಂಭಿಕ ಹಂತದಲ್ಲಿ ಮಂಗಳಮುಖಿಯರಲ್ಲಿ ಅರಿವು ಮೂಡಿಸಬೇಕು, ಒಂದು ವೇಳೆ ಸಮಸ್ಯೆ ಮುಂದುವರಿದರೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸರಿಗೆ ನಿರ್ದೇಶನ ನೀಡಿದರು. ಇದೇ ವೇಳೆ ಸಭೆಯಲ್ಲಿದ್ದ ಸ್ಥಳೀಯ ಟ್ರಾನ್ಸ್‌ಜೆಂಡರ್ ಸಂಘಟನೆಗಳ ಪ್ರತಿನಿಧಿಗಳು ಮಾತನಾಡಿ, ಹೊರರಾಜ್ಯಗಳಿಂದ ಬರುವ ಮಂಗಳಮುಖಿಯರು ನಗರದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಹಾಗೂ ವಸತಿ ಯೋಜನೆಯ ಕುರಿತು ಚರ್ಚಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರ್ವೆಯಂತೆ 96 ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ನೋಂದಾಯಿಸಿಕೊಂಡಿದ್ದು, ಇವರಿಗೆ ಪುನರ್ವಸತಿ ಒದಗಿಸಲು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಲ್ಲದೆ ವಸತಿ ನಿವೇಶನ ರಹಿತ 15 ಮಂಗಳಮುಖಿಯರ ಪಟ್ಟಿಯನ್ನು ಮಹಾನಗರಪಾಲಿಕೆಗೆ ನೀಡಲಾಗಿದ್ದು, ಮಹಿಳಾ ಅಭಿವೃದ್ಧಿ ನಿಗಮದಿಂದ ಸ್ವಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಧನ ನೀಡಲು ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ ಕಾರ್ಬಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಧರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮಂಗಳಮುಖಿ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ