ಮೂಡುಬಿದಿರೆ: ಡಿ.ಕೆ. ಜಿ.ಪಂ. ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕಿನ್ನಿಗೋಳಿ ರೋಟರಿ ಆಂಗ್ಲಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ಉತ್ತರ ವಲಯ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಅಥ್ಲೆಟಿಕ್ಸ್ ಕ್ರೀಡಾಕೂಟವು ಶುಕ್ರವಾರ ಸ್ವರಾಜ್ಯ ಮೈದಾನದಲ್ಲಿ ನಡೆಯಿತು.
ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ವಿದ್ಯಾರ್ಥಿಗಳು ಕಲಿಯೊಂದಿಗೆ ಪರ್ಯತರ ಚಟುವಟಿಕೆಗಳಿಗೆ ಒತ್ತು ನೀಡಬೇಕು ಎಂದರು. ಆದರೆ ಕಾರ್ಯಕ್ರಮದ ವೇಳೆ ನಿಯಮದ ಪ್ರಕಾರ ಕ್ರೀಡಾ ಗೌರವ ರಕ್ಷೆಯ ಸ್ವೀಕಾರಕ್ಕೆ ಶಾಸಕರ ಬದಲಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಕ್ಷೇಪಿಸಿ ಶಾಸಕ ಉಮಾನಾಥ ಕೋಟ್ಯಾನ್ ಸಿಟ್ಟುಗೊಂಡು, ವೇದಿಕೆಯಲ್ಲೇ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ತಮ್ಮನ್ನು ನಿರ್ಲಕ್ಷ್ಯ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಅಧಿಕಾರಿಗಳು ಸಮಜಾಯಿಷಿ ನೀಡಲು ಮುಂದಾದರೂ ಅದನ್ನು ಲೆಕ್ಕಿಸದೆ ಸಭಾ ಕಾರ್ಯಕ್ರಮದಿಂದ ಹೊರನಡೆದರು.
ಸರ್ಕಾರಿ ನಿಯಮ ಉಲ್ಲಂಘಿಸಿ ಶಾಸಕರನ್ನು ಕಡೆಗಣಿಸಿರುವ ಬಗ್ಗೆ ಡಿಡಿಪಿಐ ಹಾಗೂ ಮೇಲಾಧಿಕಾರಿಗಳಿಗೆ ದೂರು ಸಲ್ಲಿಸುವುದಾಗಿ ಶಾಸಕರು ತಿಳಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಬೇಕಿತ್ತು, ಕಟೀಲು ಕ್ಷೇತ್ರದ ಅನುವಂಶಿಕ ಮೊಕ್ತೇಸರ ವೇ.ಮೂ. ವಾಸುದೇವ ಆಸ್ರಣ್ಣ ಆಶೀರ್ವಚನ ನೀಡಿದರು. ರೋಟರಿ ಜಿಲ್ಲಾ ರಾಜ್ಯಪಾಲ ಸತೀಶ್ ಬೋಳಾರ್ ಧ್ವಜಾರೋಹಣ ನೆರವೇರಿಸಿದರು. ಕೆಎಂಎಫ್ ನಿರ್ದೇಶಕ ಕೆ.ಪಿ ಸುಚರಿತ ಶೆಟ್ಟಿ ಕ್ರೀಡಾ ಪ್ರತಿಜ್ಞೆ ಬೋಧಿಸಿದರು ಹಾಗೂ ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಜೇಮ್ಸ್ ಕುಟಿನ್ನ ಪಥಸಂಚಲನದ ಗೌರವ ಸ್ವೀಕರಿಸಿದರು.