ಮಂಗಳೂರು: ನಾಡಹಬ್ಬ ದಸರಾ ಹಬ್ಬದ ಸಂಭ್ರಮ ಹಾಗೂ ರಜೆಯ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆಯನ್ನು ಸಂಪೂರ್ಣವಾಗಿ ಬಹಿಷ್ಕರಿಸಿ ಕಾಲೇಜಿನ ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ಮಂಗಳೂರಿನ ಬೆಂದೂರ್ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಕರಾವಳಿಯ ಪ್ರಮುಖ ಹಬ್ಬವಾದ ಮಂಗಳೂರು ದಸರಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡದೆ ಪರೀಕ್ಷೆ ನಡೆಸುತ್ತಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮುಂಚಿತವಾಗಿ ಮನವಿ ಮಾಡಿಕೊಂಡರೂ ಕಾಲೇಜು ಆಡಳಿತ ಮಂಡಳಿಯು ಪರೀಕ್ಷಾ ದಿನಾಂಕಗಳನ್ನು ಮುಂದೂಡಲು ನಿರಾಕರಿಸಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ಆಡಳಿತ ಮಂಡಳಿ ವಿರುದ್ಧ ಧಿಕ್ಕಾರ ಕೂಗಿದರು. ಹಬ್ಬದ ಸಂದರ್ಭದಲ್ಲಿ ಪರೀಕ್ಷೆ ಬರೆಯುವುದಿಲ್ಲ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಕಾಲೇಜಿನ ಈ ಧೋರಣೆಯನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ಸಂಘಟನೆಯ ಮುಖಂಡರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳನ್ನು ಮನವೋಲಿಸುವ ಪ್ರಯತ್ನಗಳು ಮುಂದುವರಿದಿವೆ.