image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹಾವು ಕಡಿತಕ್ಕೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಹಾವು ಕಡಿತಕ್ಕೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಲು ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

ಮಂಗಳೂರು, ಅಕ್ಟೋಬರ್ 12: ಹಾವು ಕಡಿತಕ್ಕೊಳಗಾದ ರೋಗಿಗಳಿಗೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡದೆ ಇತರ ಆಸ್ಪತ್ರೆಗಳಿಗೆ ರವಾನಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಎಚ್ಚರಿಸಿದ್ದಾರೆ.  ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಹಾವು ಕಡಿತ ಮತ್ತು ತಡೆಗಟ್ಟುವಿಕೆ ಕಾರ್ಯಕ್ರಮ ಹಾಗೂ ಮರಣ ಪ್ರಕರಣಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. local ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ ಕನಿಷ್ಠ ಪ್ರಾಥಮಿಕ ಚಿಕಿತ್ಸೆ ನೀಡದೆ ಬೇರೆಡೆಗೆ ಕಳುಹಿಸುವುದರಿಂದ ಚಿಕಿತ್ಸೆ ವಿಳಂಬವಾಗಿ ಸಾವು ಸಂಭವಿಸುತ್ತಿರುವ ಪ್ರಕರಣಗಳು ವರದಿಯಾಗಿವೆ. ಇಂತಹ ನಿರ್ಲಕ್ಷ್ಯ ವಹಿಸುವ ಆಸ್ಪತ್ರೆಗಳಿಗೆ ತಕ್ಷಣ ನೋಟಿಸ್ ಜಾರಿ ಮಾಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ನಿರ್ದೇಶನ ನೀಡಿದರು.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHC) ಹಾವು ಕಡಿತಕ್ಕೆ ಅಗತ್ಯವಿರುವ ಚಿಕಿತ್ಸೆ ಹಾಗೂ ಔಷಧಗಳು ಲಭ್ಯವಿದ್ದು, ಸಾರ್ವಜನಿಕರು ತಕ್ಷಣ ಸಮೀಪದ ಕೇಂದ್ರಕ್ಕೆ ಧಾವಿಸಬೇಕು ಎಂದು ಮನವಿ ಮಾಡಿದರು. ಈ ಕುರಿತು ಗ್ರಾಮಸಭೆಗಳಲ್ಲಿ ಅರಿವು ಮೂಡಿಸಲು ತಿಳಿಸಿದರು.

ಸಭೆಯಲ್ಲಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ, ರಾಜ್ಯ ಸರ್ಕಾರವು ಹಾವು ಕಡಿತವನ್ನು ಅಧಿಸೂಚಿತ ಕಾಯಿಲೆ ಎಂದು ಘೋಷಿಸಿದ್ದು, ಎಲ್ಲಾ ಆಸ್ಪತ್ರೆಗಳು ಇಂತಹ ಪ್ರಕರಣಗಳ ಮಾಹಿತಿಯನ್ನು ಆರೋಗ್ಯ ಇಲಾಖೆಗೆ ನೀಡುವುದು ಕಡ್ಡಾಯ ಎಂದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ನೀಡಿರುವ ಅಂಕಿ-ಅಂಶಗಳ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2023 ರಲ್ಲಿ 365, 2024 ರಲ್ಲಿ 625 (4 ಸಾವು), 2025 ರಲ್ಲಿ 752 (5 ಸಾವು) ಹಾಗೂ 2026 ರ ಸೆಪ್ಟೆಂಬರ್ ವರೆಗೆ 527 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, 4 ಜನರು ಮೃತಪಟ್ಟಿದ್ದಾರೆ. ಈ ಸಭೆಯಲ್ಲಿ ವೆನ್‍ಲಾಕ್ ಆಸ್ಪತ್ರೆಯ ಅಧೀಕ್ಷಕ ಡಾ. ಶಿವಪ್ರಕಾಶ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಹಾಗೂ ಆಸ್ಪತ್ರೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ