ಮಂಗಳೂರು: ರಾಜಕೀಯ, ಶಿಕ್ಷಣ, ಆರೋಗ್ಯ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಹಿಂದೆ ಇದ್ದ ಮೌಲ್ಯಗಳು ಮತ್ತು ಪಾವಿತ್ರತೆ ಕುಸಿಯುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಸಂದರ್ಭದಲ್ಲಿ ಮಾಧ್ಯಮಗಳು ತಮ್ಮ ನೈತಿಕ ಜವಾಬ್ದಾರಿಯನ್ನು ಮರೆಯಬಾರದು ಹಾಗೂ ಮಾಧ್ಯಮದ ಮೌಲ್ಯಗಳನ್ನು ಕಾಪಾಡುವುದು ಪತ್ರಕರ್ತರ ಮುಖ್ಯ ಕರ್ತವ್ಯವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ್ ಆಳ್ವ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ನಡೆದ ಮಂಗಳೂರು ಪ್ರೆಸ್ ಕ್ಲಬ್ನ ನವೀಕೃತ 'ಅಕ್ಷರ ಸಭಾಂಗಣ' ಉದ್ಘಾಟನಾ ಸಮಾರಂಭದಲ್ಲಿ ದೀಪ ಪ್ರಜ್ವಲಿಸಿ ಅವರು ಮಾತನಾಡಿದರು. ಸಮಾಜದ ತಪ್ಪುಗಳನ್ನು ಎತ್ತಿತೋರಿಸುವ ಜತೆಗೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಕಾರ್ಯವೈಖರಿಯನ್ನು ತಿದ್ದುವ ಮಹತ್ವದ ಜವಾಬ್ದಾರಿ ಮಾಧ್ಯಮಕ್ಕಿದೆ. ಪತ್ರಿಕಾ ಧರ್ಮದ ಪಾಲನೆಯಿಂದ ಮಾತ್ರ ಸಮಾಜದ ಸುಧಾರಣೆ ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಅಕ್ಷರ ಸಭಾಂಗಣ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್, ನಗರದ ಅಭಿವೃದ್ಧಿಯಲ್ಲಿ ಮಾಧ್ಯಮದ ಕೊಡುಗೆ ಹಿರಿದಾದುದು ಎಂದರು. ರಸ್ತೆಗಳ ದುಸ್ಥಿತಿ ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ತೆರೆದಿಡುವ ಜನಪರ ವರದಿಗಾರಿಕೆಯಿಂದ ನಗರದ ಹಲವು ಅಭಿವೃದ್ಧಿ ಕಾರ್ಯಗಳಿಗೆ ವೇಗ ದೊರೆತಿದೆ. ಕಟ್ಟಡ ನಿರ್ಮಾಣ, ಸೆಟ್ಬ್ಯಾಕ್ ಹಾಗೂ ರಸ್ತೆ ಅಗಲೀಕರಣದಂತಹ ವಿಚಾರಗಳಲ್ಲಿ ಆಡಳಿತ ವ್ಯವಸ್ಥೆ ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕಿದ್ದು, ನಗರ ಯೋಜನೆ ಮತ್ತು ಸಾರ್ವಜನಿಕ ಸುರಕ್ಷತೆ ವಿಷಯಗಳಲ್ಲಿ ಮಾಧ್ಯಮಗಳು ಜನರನ್ನು ಜಾಗೃತಗೊಳಿಸಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ಕ್ಲಬ್ನ ಸ್ಥಾಪಕ ಅಧ್ಯಕ್ಷ ಕೆ. ಆನಂದ ಶೆಟ್ಟಿ ನಾಮಫಲಕ ಅನಾವರಣಗೊಳಿಸಿದರು. ಪ್ರೆಸ್ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ರಾಜ್ಯ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಪ್ರೆಸ್ಕ್ಲಬ್ ಉಪಾಧ್ಯಕ್ಷ ಮುಹಮ್ಮದ್ ಅರಿಫ್ ಪಡುಬಿದ್ರಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಧನ್ಯವಾದ ಸಮರ್ಪಿಸಿದರು.