ಪುತ್ತೂರು: ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇನ್ನೋನೆಕ್ಸ್ಟ್(Innonxt) ಎಂಬ ಸಂಸ್ಥೆಯ ವತಿಯಿಂದ ಆಸ್ಟ್ರೋನಮಿ ಎಕ್ಸ್ಪೋ 1.0 (Astronomy expo 1.0) ಮಾಹಿತಿ ಕಾರ್ಯಾಗಾರ ನಡೆಯಿತು. ಬಾಹ್ಯಾಕಾಶ ಹಾಗೂ ರಾಕೆಟ್ ವಿಜ್ಞಾನದ ಕುರಿತು ಶಾಲಾ- ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಸಂಸ್ಥೆಯು ರಾಜ್ಯಾದ್ಯಂತ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಇದರ ಕುರಿತು ಮಾಹಿತಿ ನೀಡಲಾಯಿತು. ಇದನ್ನು ಇನ್ನೋನೆಕ್ಸ್ಟ್ (Innonxt) ಸಂಸ್ಥೆಯ ಡಾ. ಅನು ಮತ್ತು ತಂಡದವರು ನಡೆಸಿಕೊಟ್ಟರು.
ಕಾರ್ಯಾಗಾರದಲ್ಲಿ ಬಾಹ್ಯಾಕಾಶ ವಿಜ್ಞಾನದ ಕೌತುಕಗಳು ಗ್ರಹ ಹಾಗೂ ನಕ್ಷತ್ರಗಳ ಚಲನೆ ಮತ್ತು ಶಬ್ಧಗಳನ್ನು ವಿದ್ಯಾರ್ಥಿಗಳಿಗೆ ಪ್ರತ್ಯಕ್ಷವಾಗಿ ತೋರಿಸಲಾಯಿತು. ಇಸ್ರೋ ವಿಜ್ಞಾನಿಗಳೊಂದಿಗೆ ನೇರ ಸಂವಾದ ಹಾಗೂ ರಾಕೆಟ್ ವಿಜ್ಞಾನದ ಬಗ್ಗೆ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, “ಇಂದಿನ ಕಾಲಘಟ್ಟದಲ್ಲಿ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿನ ಬೆಳವಣಿಗೆ ಅತ್ಯಂತ ವೇಗವಾಗಿ ಸಾಗುತ್ತಿರುವ ಹಂತದಲ್ಲಿ ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಆಸಕ್ತಿ ತೋರುವ ಅವಶ್ಯಕತೆ ಇದೆ” ಎಂದು ನುಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಪುಲ್ ರೈ ಭಾಗವಹಿಸಿದ್ದರು. ಪ್ರಾಂಶುಪಾಲರಾದ ಮಹೇಶ್ ನಿಟಿಲಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಾಗಾರವನ್ನು ನಡೆಸಿಕೊಟ್ಟ ತಂಡಕ್ಕೆ ಆಡಳಿತಮಂಡಳಿಯ ಸದಸ್ಯರಾದ ಡಾ. ಕೆ.ಎನ್. ಸುಬ್ರಹ್ಮಣ್ಯ ಇವರು ಸ್ಮರಣಿಕೆ ನೀಡಿ ಗೌರವಿಸಿದರು.
ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.