ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಪಾಲಿಟೆಕ್ನಿಕ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮೈಸೂರು ಸಂಸ್ಥಾನದ ಮಾಜಿ ದಿವಾನ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮದಿನಾಚರಣೆಯನ್ನು ಇತ್ತೀಚೆಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪಾಲಿಟೆಕ್ನಿಕ್ನ ಪ್ರಾಂಶುಪಾಲರಾದ ಶ್ರೀ ಸಂತೋಷ್ ಅವರು, ಇಂದಿನ ಮೊಬೈಲ್ ಹಾಗೂ ತಂತ್ರಜ್ಞಾನದ ಯುಗದಲ್ಲಿ ವಿದ್ಯಾರ್ಥಿಗಳು ಇತಿಹಾಸ ಮತ್ತು ಮಹನೀಯರ ಸಾಧನೆಗಳನ್ನು ತಿಳಿದುಕೊಳ್ಳುವುದು ಅತ್ಯಗತ್ಯ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಜ್ಞಾನಾರ್ಜನೆಯ ಆಸಕ್ತಿಯನ್ನು ಬೆಳೆಸುವುದರ ಜೊತೆಗೆ ಪ್ರೇರಣೆ ನೀಡುತ್ತವೆ ಎಂದರು.
ಮುಖ್ಯ ಉಪನ್ಯಾಸ ನೀಡಿದ ಎಸ್ಡಿಎಂ ಕಾಲೇಜಿನ ಕಲಾನಿಕಾಯದ ಡೀನ್ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಬೋಜಮ್ಮ ಕೆ. ಎನ್. ಅವರು, ಮೈಸೂರಿನ ಸೌಂದರ್ಯೀಕರಣ, ಕೈಗಾರಿಕಾ ಬೆಳವಣಿಗೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಸರ್ ಮಿರ್ಜಾ ಇಸ್ಮಾಯಿಲ್ ಅವರ ಆಡಳಿತಾತ್ಮಕ ದೂರದೃಷ್ಟಿ ಮತ್ತು ಕೊಡುಗೆಗಳನ್ನು ಸ್ಮರಿಸಿದರು.
ಬೆಳ್ತಂಗಡಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಡಿ. ಯದುಪತಿ ಗೌಡ ಅವರು ಮಾತನಾಡಿ, ಮಹನೀಯರ ಸಾಧನೆ ಹಾಗೂ ಆದರ್ಶಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಇತಿಹಾಸದ ಸ್ಮರಣೆಯ ಮುಖ್ಯ ಉದ್ದೇಶವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಅವರು, ವಿಶ್ವೇಶ್ವರಯ್ಯ ಹಾಗೂ ಮೈಸೂರು ಒಡೆಯರ್ಗಳ ಕೊಡುಗೆಗಳನ್ನು ಸ್ಮರಿಸಿ, ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಅರಿವನ್ನು ಯುವಜನತೆಯಲ್ಲಿ ಮೂಡಿಸುವ ಅಗತ್ಯತೆಯನ್ನು ಪ್ರತಿಪಾದಿಸಿದರು.
ವೇದಿಕೆಯಲ್ಲಿ ಕಚೇರಿಯ ವ್ಯವಸ್ಥಾಪಕರಾದ ಚಂದ್ರನಾಥ ಜೈನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಶ್ರೀಮತಿ ನಮಿತಾ ಶೆಟ್ಟಿ ಸ್ವಾಗತಿಸಿ, ಉಪನ್ಯಾಸಕ ನಿಖಿತ್ ಅವರು ಉಪನ್ಯಾಸಕರ ಪರಿಚಯ ಮಾಡಿಕೊಟ್ಟರು. ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ಗಣ್ಯರು, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.