ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 53ನೇ ಬಜಾಲ್ ವಾರ್ಡ್‌ಗೆ ಒಳಪಡುವ ಪೂವರ ಕೆರೆ ರಸ್ತೆಯಿಂದ ಕಲ್ಲಗುಡ್ಡೆವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಈ ಯೋಜನೆಯು ಒಟ್ಟು ರೂ. 10 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಪ್ರದೇಶದ ಸಂಪರ್ಕ ವ್ಯವಸ್ಥೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಬಜಾಲ್ ಪ್ರದೇಶದ ಪ್ರಮುಖರಾದ ಚಂದ್ರಶೇಖರ್ ಬಜಾಲ್ ಹಾಗೂ ಸ್ಥಳೀಯ ನಿವಾಸಿಗಳ ಸುದೀರ್ಘ ದಿನಗಳ ಬೇಡಿಕೆಯಂತೆ ಈ ಅಭಿವೃದ್ಧಿ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಸ್ಥಳೀಯರ ಸಹಕಾರದೊಂದಿಗೆ ಕಾಮಗಾರಿಯನ್ನು ಗುಣಮಟ್ಟದಿಂದ ಹಾಗೂ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಶಂಕುಸ್ಥಾಪನೆ ಸಮಾರಂಭದಲ್ಲಿ ಸ್ಥಳೀಯ ಪ್ರಮುಖರಾದ ಕಿರಣ್ ರೈ, ಸುಕೇಶ್ ಅಳಪೆ, ಪಕ್ಷದ ವಿವಿಧ ಹಂತದ ಪದಾಧಿಕಾರಿಗಳು, ಬಜಾಲ್ ವಾರ್ಡಿನ ಸಕ್ರಿಯ ಕಾರ್ಯಕರ್ತರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದು ಕಾಮಗಾರಿಗೆ ಬೆಂಬಲ ಸೂಚಿಸಿದರು.