ಮಂಗಳೂರು : ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಭಾಷಾ ವಿಭಾಗ, ಕನ್ನಡ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಡಾ. ಶಿವರಾಮ ಕಾರಂತ ಟ್ರಸ್ಟ್‌ನ ಅಧ್ಯಕ್ಷ ಡಾ. ಗಣನಾಥ ಎಕ್ಕಾರು, ಕನ್ನಡ ಭಾಷೆಯ ಇತಿಹಾಸ, ಸಾಹಿತ್ಯಿಕ ಶ್ರೀಮಂತಿಕೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಆಳವಾಗಿ ಅರಿತುಕೊಳ್ಳುವ ಮೂಲಕ ಭಾಷೆಯ ಬೆಳವಣಿಗೆಗೆ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂದರು. ಆಧುನಿಕ ಜಗತ್ತಿನಲ್ಲಿ ಇಂಗ್ಲಿಷ್ ಭಾಷೆಗೆ ನೀಡುವ ಮಹತ್ವದಂತೆಯೇ ಮಾತೃಭಾಷೆಗೂ ಆದ್ಯತೆ ನೀಡಬೇಕೆಂದು ಅವರು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಮಾತನಾಡಿ, ಯುವಜನರು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರೀತಿಯಿಂದ ಅಧ್ಯಯನ ಮಾಡಿ ಭಾಷಾಭಿಮಾನ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಇದೇ ವೇಳೆ ಪೊಲೀಸ್ ಅಧಿಕಾರಿಗಳಾದ ಶಿವಾನಂದ ಹಣಪುರ ಮತ್ತು ಮೆಹಬೂಬಿ ಮರಕುಂದ ಅವರು ವಿದ್ಯಾರ್ಥಿಗಳಿಗೆ ಡಿಜಿಟಲ್ ವಂಚನೆಗಳ ಕುರಿತು ಅರಿವು ಮೂಡಿಸಿ, ಸಾಮಾಜಿಕ ಮಾಧ್ಯಮಗಳ ಬಳಕೆಯಲ್ಲಿ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದರು.