ಮಂಗಳೂರು: ಭಾಷೆಯು ನಾಗರಿಕ ಜೀವನದ ತಳಹದಿಯಾಗಿದ್ದು, ಕನ್ನಡವು ನಮ್ಮ ಉಸಿರಾಗಿದೆ ಎಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ಅಧ್ಯಕ್ಷ ಡಾ. ನವೀನ್ ಶೆಟ್ಟಿ ಕೆ. ಅಭಿಪ್ರಾಯಪಟ್ಟಿದ್ದಾರೆ.
ನಂತೂರಿನ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಎನ್ಎಸ್ಎಸ್ ಘಟಕದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಕನ್ನಡ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲಾ-ಕಾಲೇಜುಗಳಲ್ಲಿ ಕನ್ನಡ ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುವ ವಾತಾವರಣ ನಿರ್ಮಾಣವಾಗಬೇಕು. ಇಂದಿನ ಯುವ ಪೀಳಿಗೆಯಲ್ಲಿ ಸಾಹಿತ್ಯ ಓದುವ ಮತ್ತು ರಚಿಸುವ ಅಭಿರುಚಿ ಹೆಚ್ಚಾಗಿ ಬೆಳೆಯುವ ಮೂಲಕ ಭವಿಷ್ಯದಲ್ಲಿ ಉತ್ತಮ ಕವಿ-ಸಾಹಿತಿಗಳು ಮೂಡಿಬರಬೇಕು ಎಂದು ಅವರು ಆಶಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ಮಾತನಾಡಿ, ಸಾಹಿತ್ಯಾಸಕ್ತಿಯು ವಿದ್ಯಾರ್ಥಿಗಳ ಜೀವನದಲ್ಲಿ ಸಕಾರಾತ್ಮಕ ಬದಲಾವಣೆ ತರಬಲ್ಲದು. ಪರಿಷತ್ತಿನ ದತ್ತಿ ನಿಧಿಯನ್ನು ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಒಲವು ಮೂಡಿಸುವ ಕಾರ್ಯಕ್ರಮಗಳಿಗೆ ಬಳಸುತ್ತಿರುವುದು ತೃಪ್ತಿ ತಂದಿದೆ ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ ಅವರು ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಕವನ ರಚನಾ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಸುರತ್ಕಲ್ ಗೋವಿಂದ ದಾಸ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಕೃಷ್ಣಮೂರ್ತಿ ಸಿ. ಹಾಗೂ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷೆ ವಿಜಯಲಕ್ಷ್ಮಿ ಬಿ. ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಹೇಂದ್ರ ಹಡಗಲಿ, ವೆಂಕಟೇಶ ಗಟ್ಟಿ, ಜಯಲಕ್ಷ್ಮಿ ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ರವಿಶಂಕರ ಹೆಗಡೆ ಸ್ವಾಗತಿಸಿದರೆ, ಎನ್ಎಸ್ಎಸ್ ಯೋಜನಾಧಿಕಾರಿ ಸಂತೋಷ್ ಶೆಟ್ಟಿ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಟಿ.ವಿ. ಗಿರಿ ಕಾರ್ಯಕ್ರಮ ನಿರೂಪಿಸಿದರು.