ಮಂಗಳೂರು: ಕೃತಕ ಬುದ್ಧಿಮತ್ತೆ (ಎ.ಐ) ಸೇರಿದಂತೆ ಆಧುನಿಕ ತಂತ್ರಜ್ಞಾನದ ಕುರಿತು ಸೂಕ್ತ ಅರಿವಿಲ್ಲದಿರುವುದೇ ಸೈಬರ್ ಅಪರಾಧಗಳು ಹೆಚ್ಚಾಗಲು ಮುಖ್ಯ ಕಾರಣ ಎಂದು ಸೈಬರ್ ಸುರಕ್ಷತಾ ತಜ್ಞ ಡಾ. ಅನಂತ ಪ್ರಭು ತಿಳಿಸಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.
ಕಂಪ್ಯೂಟರ್, ಮೊಬೈಲ್, ಇಂಟರ್ನೆಟ್ ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವಾಗ ಬಳಕೆದಾರರು ಅಗತ್ಯ ಜಾಗ್ರತೆ ಮತ್ತು ಮಾಹಿತಿ ಹೊಂದಿರಬೇಕು. ಇಲ್ಲವಾದಲ್ಲಿ ವೈಯಕ್ತಿಕ ಮಾಹಿತಿಗಳು ಸೋರಿಕೆಯಾಗಿ ತೊಂದರೆಗೆ ಸಿಲುಕುವ ಸಾಧ್ಯತೆ ಇರುತ್ತದೆ. ಸೈಬರ್ ದಾಳಿ ಹಾಗೂ ಮೋಸದಿಂದ ಪಾರಾಗಲು ಪ್ರತಿಯೊಬ್ಬರೂ ಮೂಲಭೂತ ಸೈಬರ್ ಸುರಕ್ಷತಾ ನಿಯಮಗಳ ಜ್ಞಾನ ಹೊಂದುವುದು ಅಗತ್ಯ ಎಂದು ಅವರು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಹಾಗೂ ಗೋಷ್ಠಿ ನಿರ್ದೇಶಕ ಕಿರಣ್ ಸಿರ್ಸಿಕರ್ ಉಪಸ್ಥಿತರಿದ್ದರು. ಹರೀಶ್ ಆದೂರು ಸ್ವಾಗತಿಸಿ, ಕೋಶಾಧಿಕಾರಿ ವಿಜಯ ಕೋಟ್ಯಾನ್ ವಂದಿಸಿದರು.