ಮೂಡುಬಿದಿರೆ: ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವಿದ್ಯಾಗಿರಿಯ ಪಂಚಕರ್ಮ ವಿಭಾಗದ ವತಿಯಿಂದ ಆಯೋಜಿಸಲಾಗಿರುವ ಎಂಟು ದಿನಗಳ ‘ಅಭ್ಯಂಗ ಸಪ್ತಾಹ’ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಲಾಗಿದೆ. ಆತ್ಮಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಸುಬ್ರಹ್ಮಣ್ಯ ಪದ್ಯಾಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆಯುರ್ವೇದದ ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಯಲ್ಲಿ ಅಭ್ಯಂಗಕ್ಕೆ ಪ್ರಮುಖ ಸ್ಥಾನವಿದೆ. ದೇಹ ಹಾಗೂ ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಲು ಮತ್ತು ಉತ್ತಮ ಜೀವನಶೈಲಿ ರೂಪಿಸಿಕೊಳ್ಳಲು ಈ ಚಿಕಿತ್ಸೆ ಅತ್ಯಂತ ಪರಿಣಾಮಕಾರಿ ಎಂದು ಅಭಿಪ್ರಾಯಪಟ್ಟರು.
ನವೆಂಬರ್ 7ರಿಂದ 14ರವರೆಗೆ ನಡೆಯಲಿರುವ ಈ ಶಿಬಿರದಲ್ಲಿ ಸಾರ್ವಜನಿಕರಿಗೆ ಅಭ್ಯಂಗ ಚಿಕಿತ್ಸೆಯ ಮಹತ್ವ ಮತ್ತು ಪ್ರಯೋಜನಗಳನ್ನು ಪರಿಚಯಿಸಲಾಗುತ್ತದೆ. ಈ ಚಿಕಿತ್ಸೆಯು ದೇಹದ ಪೋಷಣೆ, ಚರ್ಮದ ಕಾಂತಿ ಹೆಚ್ಚಳ, ವಾತ ಸಂಬಂಧಿತ ಸಮಸ್ಯೆಗಳ ಶಮನ ಹಾಗೂ ದೈಹಿಕ-ಮಾನಸಿಕ ಒತ್ತಡ ನಿವಾರಣೆಗೆ ಸಹಕಾರಿಯಾಗಿದೆ. ಪ್ರತಿದಿನ ಬೆಳಿಗ್ಗೆ 7ರಿಂದ ಸಂಜೆ 4ರವರೆಗೆ ಶಿಬಿರ ನಡೆಯಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಪ್ಯಾಕೇಜ್ ದರದಲ್ಲಿ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿದೆ. ಆಯುರ್ವೇದದ ಸಾಂಪ್ರದಾಯಿಕ ವೈದ್ಯ ಪದ್ಧತಿಯನ್ನು ಜನಸಾಮಾನ್ಯರಿಗೆ ತಲುಪಿಸುವುದು ಮತ್ತು ದೀಪಾವಳಿಯ ಸಂಭ್ರಮದಲ್ಲಿ ಆರೋಗ್ಯ-ಕ್ಷೇಮಕ್ಕೆ ಆದ್ಯತೆ ನೀಡುವುದು ಈ ಶಿಬಿರದ ಮುಖ್ಯ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುರೇಖಾ ಪೈ ಉಪಸ್ಥಿತರಿದ್ದರು. ಪಂಚಕರ್ಮ ವಿಭಾಗದ ಡಾ. ರೋಹಿಣಿ ಪುರೋಹಿತ್ ಸ್ವಾಗತಿಸಿ, ಡಾ. ವಿಜಯಲಕ್ಷ್ಮಿ ವಂದಿಸಿದರು.