image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನಿಷೇಧಿತ ಪಟಾಕಿ ಬಳಕೆ ಬೇಡ: ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ

ನಿಷೇಧಿತ ಪಟಾಕಿ ಬಳಕೆ ಬೇಡ: ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ

ಮಂಗಳೂರು: ಪರಿಸರ ಮತ್ತು ಸಾರ್ವಜನಿಕರ ಆರೋಗ್ಯಕ್ಕೆ ಹಾನಿಯಾಗದಂತೆ ಸುರಕ್ಷಿತವಾಗಿ ದೀಪಾವಳಿ ಹಬ್ಬವನ್ನು ಆಚರಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಂಗಳೂರು ಪ್ರಾದೇಶಿಕ ಕಚೇರಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ದೀಪಾವಳಿಯಲ್ಲಿ ಅತಿಯಾಗಿ ಪಟಾಕಿ ಸಿಡಿಸುವುದರಿಂದ ವಾಯು ಮತ್ತು ಶಬ್ದ ಮಾಲಿನ್ಯ ಹೆಚ್ಚಾಗಿ ಮಕ್ಕಳು, ವೃದ್ಧರು, ಗರ್ಭಿಣಿಯರು ಹಾಗೂ ರೋಗಿಗಳಿಗೆ ತೊಂದರೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಿಷೇಧಿತ ಪಟಾಕಿಗಳ ಉತ್ಪಾದನೆ, ಸಂಗ್ರಹಣೆ ಹಾಗೂ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ಅಧಿಕೃತ ಕ್ಯೂಆರ್ ಕೋಡ್ ಹೊಂದಿರುವ ಹಸಿರು ಪಟಾಕಿಗಳನ್ನು (Green Crackers) ಮಾತ್ರ ಬಳಸಬೇಕು ಹಾಗೂ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ ನೀಡಲಾಗಿದೆ. ಆಸ್ಪತ್ರೆ, ಶಾಲೆ ಮತ್ತು ಪ್ರಾರ್ಥನಾ ಮಂದಿರಗಳಂತಹ ನಿಶ್ಯಬ್ದ ವಲಯಗಳಲ್ಲಿ ಪಟಾಕಿ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಲ್ಲದೆ, ವಸತಿ ಪ್ರದೇಶಗಳು ಹಾಗೂ ಕಿರಿದಾದ ಬೀದಿಗಳಲ್ಲಿ ಪಟಾಕಿ ಸಿಡಿಸುವ ಬದಲು ತೆರೆದ ಮೈದಾನಗಳನ್ನು ಬಳಸುವಂತೆ ಸೂಚಿಸಲಾಗಿದೆ. ಮಕ್ಕಳು ಹಿರಿಯರ ಮೇಲ್ವಿಚಾರಣೆಯಲ್ಲಿ ಸುರಕ್ಷಿತವಾಗಿ ಪಟಾಕಿ ಸಿಡಿಸಬೇಕು ಮತ್ತು ಪಟಾಕಿ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಧೂಳು, ಹೊಗೆ ಮತ್ತು ಶಬ್ದ ಉಂಟುಮಾಡುವ ಪಟಾಕಿಗಳಿಗಿಂತ ದೀಪಗಳನ್ನು ಬೆಳಗಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಮಂಡಳಿಯ ಪರಿಸರ ಅಧಿಕಾರಿಗಳು ಕೋರಿದ್ದಾರೆ.

Category
ಕರಾವಳಿ ತರಂಗಿಣಿ