image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕಸ್ತೂರಿ ರಂಗನ್ ವರದಿ ಒಂದು ವರ್ಷದೊಳಗೆ ಭೌತಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ – ಸಚಿವ ರಾಮಲಿಂಗಾರೆಡ್ಡಿ

ಕಸ್ತೂರಿ ರಂಗನ್ ವರದಿ ಒಂದು ವರ್ಷದೊಳಗೆ ಭೌತಿಕ ಸಮೀಕ್ಷೆ ನಡೆಸಿ ಕೇಂದ್ರಕ್ಕೆ ವರದಿ – ಸಚಿವ ರಾಮಲಿಂಗಾರೆಡ್ಡಿ

ಮಂಗಳೂರು: ಕಸ್ತೂರಿ ರಂಗನ್ ವರದಿಯ ಕುರಿತು ಮುಂದಿನ ಒಂದು ವರ್ಷದೊಳಗೆ ತಳಮಟ್ಟದ ಭೌತಿಕ ಸಮೀಕ್ಷೆ ನಡೆಸಿ, ವಾಸ್ತವಿಕ ಚಿತ್ರಣದೊಂದಿಗೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅರಣ್ಯ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಕರಾವಳಿ ಭಾಗಕ್ಕೆ ಭೇಟಿ ನೀಡಿದ ಬಳಿಕ ನಗರದ ಪಿಲಿಕುಳ ನಿಸರ್ಗಧಾಮದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಈ ಹಿಂದೆ ರಾಜ್ಯ ಸರ್ಕಾರವು ಕಸ್ತೂರಿ ರಂಗನ್ ವರದಿಯನ್ನು ಆರು ಬಾರಿ ತಿರಸ್ಕರಿಸಿ ನಿರ್ಣಯ ಕೈಗೊಂಡಿತ್ತು. ಇದೀಗ ಏಳನೇ ಬಾರಿಗೆ ತಳಮಟ್ಟದಲ್ಲಿ ಸಮೀಕ್ಷೆ ನಡೆಸಿ ವರದಿ ನೀಡಲು ಕೇಂದ್ರ ಸರ್ಕಾರದಿಂದ ಅನುಮತಿ ಕೋರಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಸಮಿತಿಯನ್ನು ರಚಿಸಿ ಸಮೀಕ್ಷಾ ಕಾರ್ಯ ಆರಂಭಿಸಲು ಸೂಚನೆ ನೀಡಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಿಆರ್‌ಝೆಡ್ (CRZ) ನಿಯಮಾವಳಿಗಳನ್ನು ಸರಳಗೊಳಿಸುವ ಕುರಿತು ರಾಜ್ಯ ಸರ್ಕಾರದಿಂದ ಈಗಾಗಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ರಾಜ್ಯದ ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ, ಮೀನುಗಾರಿಕೆ, ಕಾಂಡ್ಲಾ ಕಾಡುಗಳ ಸಂರಕ್ಷಣೆ, ಅಳಿವಿನಂಚಿನಲ್ಲಿರುವ ಜೀವವೈವಿಧ್ಯದ ರಕ್ಷಣೆ ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ಸಮುದ್ರ ಸೇರದಂತೆ ಮಾಲಿನ್ಯ ತಡೆಗಟ್ಟಲು ನಾಲ್ಕು ಇಲಾಖೆಗಳ ಸಮನ್ವಯದೊಂದಿಗೆ ವಿಶೇಷ ಕ್ರಿಯಾಯೋಜನೆ ರೂಪಿಸಿ ಒತ್ತು ನೀಡಲಾಗುವುದು ಎಂದರು. ಇದೇ ವೇಳೆ, ಪಿಲಿಕುಳ ಮೃಗಾಲಯವನ್ನು ರಾಜ್ಯ ಮೃಗಾಲಯ ಪ್ರಾಧಿಕಾರಕ್ಕೆ ಹಸ್ತಾಂತರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸುಳ್ಯದಲ್ಲಿ ಆನೆ ಕ್ಯಾಂಪ್ ನಿರ್ಮಿಸುವ ಸಂಬಂಧ ಸಮೀಕ್ಷೆ ನಡೆಸಲಾಗಿದ್ದು, ಸಲ್ಲಿಕೆಯಾದ ವರದಿಯ ಪ್ರಕಾರ ಆ ಸ್ಥಳವು ಆನೆ ಕ್ಯಾಂಪ್ ನಡೆಸಲು ಸೂಕ್ತವಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ, ಅರಣ್ಯ ಸಂರಕ್ಷಣಾಧಿಕಾರಿ ಕಮಲ ಕರಿಕಲನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ವಿ. ಕರಿಕಲನ್, ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಅರುಣ್ ಶೆಟ್ಟಿ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ