ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ (ಎಸ್ಸಿಡಿಸಿಸಿ) ಬ್ಯಾಂಕ್ ವತಿಯಿಂದ ನವೆಂಬರ್ 20ರಂದು ಮಂಗಳೂರಿನಲ್ಲಿ ನಡೆಯಲಿರುವ 73ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯಮಟ್ಟದ ಸಮಾರಂಭದಲ್ಲಿ ಪತ್ರಿಕಾ ರಂಗದ ಸೇವೆಗಾಗಿ ನೀಡಲಾಗುವ ಪ್ರತಿಷ್ಠಿತ ಗೌರವ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಹಾಗೂ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರು ಆಯ್ಕೆಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಹಕಾರಿ ಕ್ಷೇತ್ರದ ಬೆಳವಣಿಗೆ ಹಾಗೂ ಸಮಾಜಮುಖಿ ವರದಿಗಾರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ನೀಡಿದ ಗಣನೀಯ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ 3 ದಶಕಗಳ ಸುದೀರ್ಘ ಅನುಭವ ಹೊಂದಿರುವ ಪಿ.ಬಿ. ಹರೀಶ್ ರೈ ಅವರು ನಾಡಿನ ವಿವಿಧ ಪ್ರಮುಖ ದಿನಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದು, ಪ್ರಸ್ತುತ 'ವಿಜಯವಾಣಿ' ದಿನಪತ್ರಿಕೆಯ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪತ್ರಿಕಾ ವೃತ್ತಿಯ ಜೊತೆಗೆ ಸಂಘಟನಾ ಕ್ಷೇತ್ರದಲ್ಲೂ ಸಕ್ರಿಯರಾಗಿರುವ ಇವರು ಪ್ರಸ್ತುತ ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ (IFWJ) ರಾಷ್ಟ್ರೀಯ ಮಂಡಳಿ ಸದಸ್ಯರಾಗಿ ಹಾಗೂ ಐನೆಕಿದು-ಸುಬ್ರಹ್ಮಣ್ಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ.
73ನೇ ಸಹಕಾರ ಸಪ್ತಾಹದ ರಾಜ್ಯಮಟ್ಟದ ಕಾರ್ಯಕ್ರಮವು ನವೆಂಬರ್ 20ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಲಿದ್ದು, ಈ ವೇದಿಕೆಯಲ್ಲಿ ಪಿ.ಬಿ. ಹರೀಶ್ ರೈ ಅವರಿಗೆ ಗೌರವ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು.