ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 15, 16, 18 ಮತ್ತು 23ರ ವ್ಯಾಪ್ತಿಯ ಮಾಲಾಡಿ ಕೋರ್ಟ್, ವೆಟ್ ವೆಲ್, ಗೊಲ್ಲರಬೆಟ್ಟು, ಪೊದಾರ್ ಶಾಲೆ ಹಾಗೂ ಎಂ.ವಿ. ಶೆಟ್ಟಿ ಕಾಲೇಜು ಪರಿಸರದಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಒಳಚರಂಡಿ (ಯುಜಿಡಿ) ಸೋರಿಕೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಪಾಲಿಕೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಭಾಗಗಳಲ್ಲಿ ಒಳಚರಂಡಿ ಮುಖ್ಯ ಕೊಳವೆಯಿಂದ (ಮೈನ್ ಲೈನ್) ನಿರಂತರವಾಗಿ ಕೊಳಚೆ ನೀರು ಸೋರಿಕೆಯಾಗುತ್ತಿದ್ದು, ಸಮರ್ಪಕ ನಿರ್ವಹಣೆಯ ಕೊರತೆಯಿಂದ ಸ್ಥಳೀಯ ನಿವಾಸಿಗಳು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿದ ಶಾಸಕರು, ಪರಿಸ್ಥಿತಿಯನ್ನು ಖುದ್ದಾಗಿ ಅವಲೋಕಿಸಿದರು. ಸಮಸ್ಯೆಯ ಮೂಲವನ್ನು ಪತ್ತೆಹಚ್ಚಿ, ತಾಂತ್ರಿಕವಾಗಿ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತುರ್ತು ಹಾಗೂ ದೀರ್ಘಕಾಲೀನ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ, "ಈ ಭಾಗದ ಒಳಚರಂಡಿ ಸಮಸ್ಯೆಯ ಗಂಭೀರತೆಯನ್ನು ಈಗಾಗಲೇ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಅಲ್ಲದೆ, ನಗರಾಭಿವೃದ್ಧಿ ಸಚಿವರಿಗೂ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುವುದು. ಸಾರ್ವಜನಿಕರ ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಯಿಂದ ತುರ್ತಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯ ಕ್ರಮ ಜರುಗಿಸುವಂತೆ ಹಾಗೂ ಕಾಮಗಾರಿಗೆ ಬೇಕಾದ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಲಾಗುವುದು," ಎಂದು ತಿಳಿಸಿದರು.
ಕ್ಷೇತ್ರದ ಜನರು ಎದುರಿಸುತ್ತಿರುವ ಇಂತಹ ಮೂಲಭೂತ ಸಮಸ್ಯೆಗಳಿಗೆ ಪ್ರಥಮ ಆದ್ಯತೆ ನೀಡಿ ಪರಿಹಾರ ಒದಗಿಸುವುದು ತಮ್ಮ ಬದ್ಧತೆಯಾಗಿದೆ ಎಂದ ಶಾಸಕರು, ಮಂಗಳೂರು ಉತ್ತರ ಕ್ಷೇತ್ರದ ಇತರ ವಾರ್ಡ್ಗಳಲ್ಲಿಯೂ ಇಂತಹ ಒಳಚರಂಡಿ ಅಥವಾ ಚರಂಡಿ ನಿರ್ವಹಣಾ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಗುರುತಿಸಿ ಹಂತ ಹಂತವಾಗಿ ಶೀಘ್ರ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಥಳೀಯರಿಗೆ ಭರವಸೆ ನೀಡಿದರು.
ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿಗಳು, ಒಳಚರಂಡಿ ವಿಭಾಗದ ಇಂಜಿನಿಯರ್ಗಳು, ಸಂಬಂಧಪಟ್ಟ ಇಲಾಖೆಯ ಸಿಬ್ಬಂದಿ, ನಿಕಟಪೂರ್ವ ಮಹಾನಗರ ಪಾಲಿಕೆ ಸದಸ್ಯರು, ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.