ಮೂಡುಬಿದಿರೆ: ಕನ್ನಡ ಭಾಷೆಯ ಉಳಿವಿನ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳ ರಕ್ಷಣೆಗೂ ಸಮಾಜ ಕಾಳಜಿ ವಹಿಸಬೇಕು. ಆಂಗ್ಲ ಮಾಧ್ಯಮದ ವ್ಯಾಮೋಹದಿಂದ ಕನ್ನಡ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದ್ದು, ಇವುಗಳ ಉಳಿವಿಗೆ ಪೋಷಕರು, ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳ ಒಮ್ಮತದ ಸಹಭಾಗಿತ್ವ ಅತ್ಯಗತ್ಯ ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಧಾರಾಣಿ ಅಭಿಪ್ರಾಯಪಟ್ಟಿದ್ದಾರೆ.
ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆದ ‘ಕನ್ನಡ ನುಡಿ ಹಬ್ಬ ಸಂಭ್ರಮ–2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನ್ನಡ ಕೇವಲ ಸಂವಹನ ಮಾಧ್ಯಮವಲ್ಲ, ಅದು ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಆಧುನಿಕತೆಯಲ್ಲಿ ಇತರೆ ಭಾಷೆಗಳನ್ನು ಕಲಿಯುವುದು ಎಷ್ಟು ಮುಖ್ಯವೋ, ಮಾತೃಭಾಷೆಯನ್ನು ಪ್ರೀತಿಸುವುದು ಅಷ್ಟೇ ಮುಖ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಮಾತನಾಡಿ, ಭಾಷೆಯ ಬೆಳವಣಿಗೆಯು ಅದರ ನಿರಂತರ ಬಳಕೆಯ ಮೇಲೆ ಅವಲಂಬಿತವಾಗಿದೆ. ಮಾತೃಭಾಷೆಯ ಜ್ಞಾನವು ಇತರೆ ಭಾಷೆಗಳ ಕಲಿಕೆಗೆ ಎಂದಿಗೂ ಅಡ್ಡಿಯಾಗುವುದಿಲ್ಲ ಎಂದರು. ಇದೇ ವೇಳೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿಧಿ ಎಳಚಿತ್ತಾಯ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.