image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಹೆದ್ದಾರಿ ಅಪಘಾತ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ಸೂಚನೆ

ಹೆದ್ದಾರಿ ಅಪಘಾತ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ: ಎಸ್.ಪಿ ಸೂಚನೆ

ಮಂಗಳೂರು : ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಪದೇ ಪದೇ ಅಪಘಾತಗಳು ಸಂಭವಿಸಿ ಜೀವಹಾನಿಯಾಗುತ್ತಿರುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ತಾತ್ಕಾಲಿಕ ಹಾಗೂ ಶಾಶ್ವತ ಸುರಕ್ಷತಾ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಪಘಾತ ವಲಯಗಳಲ್ಲಿ ವೇಗ ನಿಯಂತ್ರಣ, ಟ್ರಾಫಿಕ್ ಸಿಗ್ನಲ್ ಮತ್ತು ಸೂಚನಾ ಫಲಕಗಳನ್ನು ಅಳವಡಿಸುವಂತೆ ತಿಳಿಸಿದರು. ರಾತ್ರಿ ವೇಳೆ ಬೀದಿ ದೀಪಗಳಿಲ್ಲದೆ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿಗಳಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲು ಮಹಾನಗರಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಒಟ್ಟು 42 ಪ್ರಮುಖ ಅಪಘಾತ ವಲಯಗಳನ್ನು ಗುರುತಿಸಲಾಗಿದ್ದು, ಅಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

2025-26ನೇ ಸಾಲಿನಲ್ಲಿ ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಪೊಲೀಸ್ ಮತ್ತು ಆರ್.ಟಿ.ಒ ಇಲಾಖೆಗಳು ತೀವ್ರ ಕಾರ್ಯಾಚರಣೆ ನಡೆಸಿವೆ. ಟಿಂಟೆಡ್ ಗ್ಲಾಸ್ ಅಳವಡಿಸಿದ್ದ 33,703 ವಾಹನಗಳ ಮೇಲೆ ಪ್ರಕರಣ ದಾಖಲಿಸಿ, 2025ರಲ್ಲಿ ₹73.89 ಲಕ್ಷ ಹಾಗೂ 2026ರಲ್ಲಿ ₹75.88 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ 2,604 ಪ್ರಕರಣಗಳು, ಕರ್ಕಶ ಹಾರ್ನ್ ಬಳಸಿದ 2,805 ಪ್ರಕರಣಗಳು (2025ರಲ್ಲಿ ₹7.44 ಲಕ್ಷ ಮತ್ತು 2026ರಲ್ಲಿ ₹8.38 ಲಕ್ಷ ದಂಡ) ಹಾಗೂ ಶಾಲಾ ವಾಹನಗಳಲ್ಲಿ ಮಿತಿಮೀರಿ ಮಕ್ಕಳನ್ನು ಸಾಗಿಸಿದ 974 ಪ್ರಕರಣಗಳನ್ನು ದಾಖಲಿಸಲಾಗಿದೆ.

ಅಲ್ಲದೆ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಸ್ತೆಗೆ ತ್ಯಾಜ್ಯ ನೀರು ಚೆಲ್ಲುತ್ತಾ ಸಂಚರಿಸಿದ ಮೀನು ಸಾಗಾಟ ವಾಹನಗಳ ವಿರುದ್ಧ 2026ರಲ್ಲಿ 535 ಪ್ರಕರಣ ದಾಖಲಿಸಿ ₹2.65 ಲಕ್ಷ ದಂಡ ವಿಧಿಸಲಾಗಿದೆ. ಜೀವಹಾನಿಗೆ ಕಾರಣವಾದ 279 ರಸ್ತೆ ಅಪಘಾತ ಪ್ರಕರಣಗಳಲ್ಲಿ ಒಟ್ಟು 538 ಚಾಲನಾ ಪರವಾನಗಿಗಳನ್ನು (ಡಿ.ಎಲ್) ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು. ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವಂತೆ ಎಸ್.ಪಿ ಸೂಚಿಸಿದರು.

ಸಭೆಯಲ್ಲಿ ಡಿಸಿಪಿ ರವಿಶಂಕರ್, ಎಸಿಪಿ ನಜ್ಮಾ ಫಾರೂಕಿ, ಲೋಕೋಪಯೋಗಿ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ನಾಯಕ್ ಹಾಗೂ ಆರ್.ಟಿ.ಒ ಅಧಿಕಾರಿ ಮುರಗೇಂದ್ರ ಬಿ. ಶಿರೋಳ್ಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ