image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕನಿಷ್ಠ ವೇತನ ಜಾರಿಗೆ ಸರ್ಕಾರ ಬದ್ಧ: ಶಾಹಿದ್ ತೆಕ್ಕಿಲ್

ಕನಿಷ್ಠ ವೇತನ ಜಾರಿಗೆ ಸರ್ಕಾರ ಬದ್ಧ: ಶಾಹಿದ್ ತೆಕ್ಕಿಲ್

ಮಂಗಳೂರು: ರಾಜ್ಯದಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಪರಿಷ್ಕರಣೆಯಾಗದೆ ಬಾಕಿ ಉಳಿದಿದ್ದ ಕಾರ್ಮಿಕರ ಕನಿಷ್ಠ ವೇತನವನ್ನು ಜಾರಿಗೊಳಿಸಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಶಾಹಿದ್ ತೆಕ್ಕಿಲ್ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ ಕಾರ್ಮಿಕರ ಜೀವನ ನಿರ್ವಹಣೆಗೆ ಅನುಗುಣವಾಗಿ ವೇತನ ಹೆಚ್ಚಿಸುವುದು ಅನಿವಾರ್ಯವಾಗಿದೆ ಎಂದರು. ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರ ಪ್ರಯತ್ನದಿಂದ ಕನಿಷ್ಠ ವೇತನ ಪರಿಷ್ಕರಣೆಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಇದರ ವಿರುದ್ಧ ಕೆಲವು ಬಂಡವಾಳಶಾಹಿಗಳು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಈ ಕಾನೂನು ತೊಡಕುಗಳನ್ನು ಶೀಘ್ರವೇ ನಿವಾರಿಸಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಆರು ಮಂದಿ ಸಚಿವರನ್ನು ಒಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ. ನ್ಯಾಯಾಲಯದ ಪ್ರಕರಣವನ್ನು ಆದಷ್ಟು ಬೇಗ ಇತ್ಯರ್ಥಪಡಿಸಿ ಪರಿಷ್ಕೃತ ವೇತನ ಜಾರಿಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಮೇ ತಿಂಗಳಲ್ಲಿ ಕಾರ್ಮಿಕ ಇಲಾಖೆ ಹೊರಡಿಸಿರುವ ಅಧಿಸೂಚನೆಗೆ ಯಾವುದೇ ತಡೆಯಾಜ್ಞೆ ಇಲ್ಲದಿರುವುದರಿಂದ, ಎಲ್ಲಾ ಇಲಾಖೆಗಳು ಹಾಗೂ ಸಂಸ್ಥೆಗಳು ನಿಗದಿತ ವೇತನವನ್ನೇ ನೀಡಬೇಕು. ಈ ಕುರಿತು ಯಾರೂ ಗೊಂದಲ ಸೃಷ್ಟಿಸಬಾರದು ಎಂದು ಅವರು ಸ್ಪಷ್ಟಪಡಿಸಿದರು. ಕಾರ್ಮಿಕರನ್ನು ನಾಲ್ಕು ವಿಭಾಗಗಳಾಗಿ ವಿಂಗಡಿಸಿ ಕನಿಷ್ಠ 19 ಸಾವಿರದಿಂದ 23 ಸಾವಿರ ರೂಪಾಯಿ ಹಾಗೂ ಅದಕ್ಕಿಂತ ಹೆಚ್ಚಿನ ವೇತನ ನಿಗದಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ, ದಿನಕ್ಕೆ ಕನಿಷ್ಠ 600 ರೂಪಾಯಿ ಕೂಲಿ ಸಿಗುವಂತಾಗಬೇಕು ಎಂಬುದು ಮಂಡಳಿಯ ಆಶಯವಾಗಿದೆ ಎಂದರು.

ಪತ್ರಕರ್ತರು, ಪತ್ರಿಕಾ ವಿತರಕರು ಹಾಗೂ ದೇವಸ್ಥಾನ, ಮಸೀದಿ, ಚರ್ಚ್ ಮತ್ತು ಜೈನ ಬಸದಿ ಸೇರಿದಂತೆ ವಿವಿಧ ಧಾರ್ಮಿಕ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಯನ್ನೂ ಕನಿಷ್ಠ ವೇತನ ವ್ಯಾಪ್ತಿಗೆ ತರಬೇಕೆಂಬ ಮನವಿ ಬಂದಿದ್ದು, ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಜೊತೆಗೆ ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಸಂಹಿತೆಗಳಲ್ಲಿರುವ ಸಾಧಕ-ಬಾಧಕಗಳು ಮತ್ತು ಮಹಿಳಾ ಕಾರ್ಮಿಕರ ಸುರಕ್ಷತೆ ಕುರಿತು ಪರಿಶೀಲಿಸಲು ರಾಜ್ಯದಲ್ಲೂ ಸಮಿತಿ ರಚಿಸಲಾಗುತ್ತಿದೆ. ಗಿಗ್ ಕಾರ್ಮಿಕರು, ವಾಹನ ಚಾಲಕರು, ಗ್ಯಾರೇಜ್ ಸಿಬ್ಬಂದಿ ಹಾಗೂ ಮನೆಗೆಲಸದವರ ಭದ್ರತೆ ಮತ್ತು ಆರೋಗ್ಯ ರಕ್ಷಣೆಗೆ ಸರ್ಕಾರ ವಿಶೇಷ ಮಂಡಳಿಗಳನ್ನು ರಚಿಸಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ವಿವರಿಸಿದರು.

ಇದೇ ತಿಂಗಳ 23ರಂದು ನಗರದ ಟೌನ್ ಹಾಲ್‌ನಲ್ಲಿ ಸಭಾಪತಿ ಸಲೀಂ ಅಹ್ಮದ್ ಅವರಿಗೆ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದು, ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಮ್ಮ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಬೇಕು ಎಂದು ಶಾಹಿದ್ ತೆಕ್ಕಿಲ್ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಕಾರ್ಮಿಕ ಅಧಿಕಾರಿ ಶ್ರೀಮತಿ ಮೇರಿ ಹಾಗೂ ಮಂಡಳಿಯ ಆಪ್ತ ಕಾರ್ಯದರ್ಶಿ ಗುಲಾಂ ಮುಸ್ತಫಾ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ