ಮಂಗಳೂರು: ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜು ಹಾಗೂ ಪೊಲೀಸ್ ಇಲಾಖೆಯ ಕ್ಷಿಪ್ರ ಕಾರ್ಯಾಚರಣೆ ಪಡೆಯ ಸಹಯೋಗದಲ್ಲಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕ್ಷಿಪ್ರ ಕಾರ್ಯಾಚರಣೆ ಪಡೆಯ ನಿರೀಕ್ಷಕ ಶ್ರೀ ಸಿದ್ದಯ್ಯ ಅವರು ಮಾತನಾಡಿ, ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಮಾರ್ಗದರ್ಶನ ನೀಡುವ ಪವಿತ್ರ ಗ್ರಂಥದಂತಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ ಎಂದರು. ನಾವೆಲ್ಲರೂ ಮೊದಲು ಭಾರತೀಯರು ಎಂಬ ಭಾವನೆಯೊಂದಿಗೆ ಸಮಾಜದಲ್ಲಿ ಕೋಮು ಸೌಹಾರ್ದತೆ ಹಾಗೂ ಪರಸ್ಪರ ಗೌರವವನ್ನು ಬೆಳೆಸಿಕೊಂಡು ದೇಶದ ಏಕತೆಯನ್ನು ಕಾಪಾಡಬೇಕು ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಜಯವಂತ ನಾಯಕ್ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಯು ಭಾರತೀಯ ಪ್ರಜಾಪ್ರಭುತ್ವದ ಬುನಾದಿಯನ್ನು ಬಲಪಡಿಸಿದೆ ಎಂದು ಸ್ಮರಿಸಿದರು. ಸಂವಿಧಾನವು ದುರ್ಬಲ ವರ್ಗಗಳಿಗೆ ನ್ಯಾಯ ಮತ್ತು ಘನತೆಯ ಬದುಕನ್ನು ನೀಡಿದ್ದು, ವಿದ್ಯಾರ್ಥಿಗಳು ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಆಶಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಮತ್ತು ಪೊಲೀಸ್ ಸಿಬ್ಬಂದಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದಿ ಪ್ರತಿಜ್ಞೆ ಕೈಗೊಂಡರು. ಈ ಸಂದರ್ಭದಲ್ಲಿ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಅಬ್ಬೋಕರ್ ಸಿದ್ಧಿಕ್, ಕ್ಷಿಪ್ರ ಕಾರ್ಯಾಚರಣೆ ಪಡೆಯ ಉಪ ನಿರೀಕ್ಷಕರಾದ ಶ್ರೀ ಭರತ್ ಎಸ್.ಜೆ. ಹಾಗೂ ಶ್ರೀ ಹರೀಶ್ ಕುಂದರ್ ಉಪಸ್ಥಿತರಿದ್ದರು.