ಮಂಗಳೂರು: ಈ ಸಮಾಜದಲ್ಲಿ ಮಹಿಳೆಯರು ಸ್ವಾಭಿಮಾನದಿಂದ ಬದುಕಲು ಸಹಕಾರಿ ಕ್ಷೇತ್ರ ಕಾರಣವಾಗಿದೆ ಎಂದು ವಿದಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಅವರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ., ಮಂಗಳೂರು, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ರಿ. ಮಂಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಎಲ್ಲಾ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಎಲ್ಲಾ ವಿಧದ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆಯ ಸಹಯೋಗದೊಂದಿಗೆ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾತಾಡಿ, “ಕಳೆದ 71 ವರ್ಷಗಳಲ್ಲಿ ಸಹಕಾರಿ ಕ್ಷೇತ್ರ ಬಹಳಷ್ಟು ಅಭಿವೃದ್ಧಿಯನ್ನು ಕಂಡಿದೆ. ಮಹಿಳೆಯರು ಈ ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕಲು ಸಹಕಾರಿ ಕ್ಷೇತ್ರ ಮತ್ತು ತತ್ವ ಬಹಳಷ್ಟು ಕೊಡುಗೆಯನ್ನು ನೀಡಿದೆ. ನಮ್ಮ ದೇಶ, ರಾಜ್ಯ ಮತ್ತು ಜಿಲ್ಲೆಯ ಪ್ರಗತಿಗೆ ಸಹಕಾರಿ ಕ್ಷೇತ್ರದ ಹಿರಿಯರು ಹೆಚ್ಚಿನ ಪ್ರಯತ್ನ ಪಟ್ಟಿದ್ದಾರೆ. ನ.14ರಿಂದ ರಾಜ್ಯದ ಉದ್ದಗಲಕ್ಕೂ ಒಂದು ವಾರಗಳ ಕಾಲ ಸಹಕಾರಿ ಸಪ್ತಾಹ ನಡೆಸಲಾಗುತ್ತದೆ. ಇದಕ್ಕೆ ಕಾರಣ ನಮ್ಮ ದೇಶದ ಪ್ರಥಮ ಪ್ರಧಾನಿ ಜವಾಹರ ಲಾಲ್ ನೆಹರೂ ಅವರು. ಬ್ರಿಟಿಷರಿಂದ ನಾವು ಸ್ವಾತಂತ್ರ್ಯ ಪಡೆದಾಗ ದೇಶದಲ್ಲಿ ಇದ್ದಿದ್ದು ಬರೀ 33 ಕೋಟಿ ಜನರು. ಆಗ ಊಟಕ್ಕೆ ಪರದಾಡುವ ಸನ್ನಿವೇಶ ಇಲ್ಲಿತ್ತು. ಆದರೆ ಈಗ 140 ಕೋಟಿ ಜನರ ಮೂರು ಹೊತ್ತಿನ ಊಟಕ್ಕೆ ಯಾವುದೇ ತೊಂದರೆ ಎದುರಾಗಿಲ್ಲ. ಇದಕ್ಕೆ ಕಾರಣ ಪಂಡಿತ್ ನೆಹರೂ ಅವರ ಹಸಿರು ಕ್ರಾಂತಿ ಮತ್ತು ಕ್ಷೀರ ಕ್ರಾಂತಿಯಾಗಿದೆ. ಗ್ರಾಮೀಣ ಭಾಗದ ಜನರು ಇಂದು ಸಹಕಾರಿ ತತ್ವದ ಮೂಲಕ ಕ್ರಾಂತಿಕಾರಿ ಬದಲಾವಣೆಯನ್ನು ತಮ್ಮ ಬದುಕಿನಲ್ಲಿ ಅನುಷ್ಠಾನಗೊಳಿಸಿದ್ದಾರೆ. ಜನಾರ್ದನ ಪೂಜಾರಿಯವರ ಸಾಲಮೇಳದಿಂದ ಜನಸಾಮಾನ್ಯರು ಬ್ಯಾಂಕ್ ಬಾಗಿಲು ನೋಡುವಂತಾಯಿತು. ಇಂತಹ ಕಾರ್ಯಕ್ರಮಗಳಿಂದ ಜನರು ಸ್ವಾಭಿಮಾನಿಗಳಾಗಲಿ“ ಎಂದು ಶುಭ ಹಾರೈಸಿದರು.
ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ, ”ಸಹಕಾರಿ ಕ್ಷೇತ್ರ ಮಹಿಳೆಯರ ಅಭೂತಪೂರ್ವ ಬೆಂಬಲ ಹಾಗೂ ಸಹಕಾರದಿಂದ ನಡೆಯುತ್ತಿದೆ. ಹಳ್ಳಿ ಹಳ್ಳಿಗಳಲ್ಲೂ ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸುತ್ತಿದ್ದಾರೆ. ಇವರೆಲ್ಲರ ಶ್ರಮದಿಂದ ಸಹಕಾರಿ ಕ್ಷೇತ್ರ ಶ್ರೀಮಂತವಾಗಿದೆ. ಮುಂದೆ ಇನ್ನಷ್ಟು ಸಂಭ್ರಮ ಸಡಗರದಿಂದ ಸಪ್ತಾಹ ಆಚರಣೆಯಾಗಬೇಕು“ ಎಂದರು.
ಮಾತು ಮುಂದುವರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು, ”ಸಹಕಾರಿ ಆಂದೋಲನದಲ್ಲಿ ಹೆಚ್ಚೆಚ್ಚು ಯುವಕರು ಯುವತಿಯರು ತೊಡಗಿಕೊಳ್ಳುವಂತಾಗಬೇಕು. ಹಳ್ಲಿಗಾಡಿನಲ್ಲಿ ಸಹಕಾರಿ ತತ್ವದ ಮೇಲೆ ನಂಬಿಕೆ ಇರಿಸಿ ಆಂದೋಲನದಲ್ಲಿ ಪಾಲು ಪಡೆಯುತ್ತಿರುವುದು ಹೆಮ್ಮೆಯ ವಿಚಾರ. ನ.14ರಿಂದ 20ರವರೆಗೆ ರಾಜ್ಯಾದ್ಯಂತ ಸಹಕಾರಿ ಸಪ್ತಾಹ ನಡೆಸಲಾಗುತ್ತಿದೆ. ಕೇಂದ್ರ ಸರಕಾರದಲ್ಲಿ ಸಹಕಾರಿ ಸಚಿವಲಾಯ ಮಾಡಬೇಕು ಎಂಬ ಬೇಡಿಕೆ ನಮ್ಮದಾಗಿತ್ತು. ಅದನ್ನು ಸರಕಾರ ನೆರವೇರಿಸಿದ್ದು ಅಮಿತ್ ಶಾ ಅದರ ನೇತೃತ್ವ ವಹಿಸಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಜಾತಿ, ಪಕ್ಷಗಳ ಆಧಾರದಲ್ಲಿ ಕಾರ್ಯ ನಿರ್ವಹಿಸಬಾರದು. ಹಳ್ಳಿಯ ಮುಗ್ಧ ವ್ಯಕ್ತಿ ಕೂಡ ಸಹಕಾರಿ ಬ್ಯಾಂಕ್ ಪ್ರಯೋಜನ ಪಡೆಯುವಂತಾಗಬೇಕು. ಆಗ ಇಂತಹ ಸಪ್ತಾಹದ ಆಚರಣೆ ಸಾರ್ಥಕವಾಗುತ್ತದೆ“ ಎಂದರು.
ಬಳಿಕ ಮಾತಾಡಿದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, “ಸ್ವಾತಂತ್ರ್ಯದ ಬಳಿಕ ಪಂಚವಾರ್ಷಿಕ ಯೋಜನೆಗಳಲ್ಲಿ ಸಹಕಾರಿ ಕ್ಷೇತ್ರಕ್ಕೆ ಬಲವನ್ನು ತುಂಬುವ ಕೆಲಸ ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಸಹಕಾರಿ ಕ್ಷೇತ್ರದಲ್ಲಿ ಬಹಳಷ್ಟು ಕ್ರಾಂತಿಕಾರಿ ಬದಲಾವಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರು ವ್ಯವಸ್ಥಿತವಾಗಿ ಸಹಕಾರಿ ಕ್ಷೇತ್ರವನ್ನು ಕಟ್ಟಿಕೊಂಡು ಯಶಸ್ವಿಯಾಗಿ ನಿರ್ವಹಣೆ ಮಾಡುತ್ತಿದ್ದಾರೆ“ ಎಂದರು.
ವೇದಿಕೆಯಲ್ಲಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ.ದೇವೇಗೌಡ, ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಭರತ್ ಶೆಟ್ಟಿ ವೈ., ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ, ಮೂಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮನೋಜ್ ಕುಮಾರ್ ಕೋಡಿಕಲ್, ಕೆ.ಎಸ್. ನವೀನ್, ಗುರುಸ್ವಾಮಿ, ರಮೇಶ್, ಪ್ರಸಾದ್ ರೆಡ್ಡಿ, ಜಯಕರ ಶೆಟ್ಟಿ ಇಂದ್ರಾಳಿ, ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ, ಪ್ರಸಾದ್ ಕೌಶಲ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಎಸ್ ಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಾಲಕೃಷ್ಣ ಭಟ್, ನಿರ್ದೇಶಕ ವಿನಯ್ ಕುಮಾರ್ ಸೂರಿಂಜೆ ಮತ್ತಿತರರು ಉಪಸ್ಥಿತರಿದ್ದರು.
ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಬೆಳಪು ದೇವಿಪ್ರಸಾದ್ ಶೆಟ್ಟಿ ಅವರು ಪ್ರಾಸ್ತಾವಿಕ ಮಾತನ್ನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಟಿ.ಜಿ.ರಾಜರಾಮ ಭಟ್ ಧನ್ಯವಾದ ಸಮರ್ಪಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ ”ಸಹಕಾರ ಮಾಣಿಕ್ಯ“ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಜೊತೆಗೆ 5 ಗ್ರಾಂ. ಚಿನ್ನದ ಪದಕ, 10000 ರೂ. ನಗದು ಹಾಗೂ ಪಾರಿತೋಷಕ ನೀಡಲಾಯಿತು.