ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿ ಶೀಘ್ರದಲ್ಲೇ ಹೊಸ ನಿಯಮ ಜಾರಿಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಕಾನೂನಿನ ಅನ್ವಯ ಅವಕಾಶ ಕಲ್ಪಿಸುವ ವಿಚಾರದಲ್ಲಿ ಬೆಂಗಳೂರಿನ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಗಣಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಸೇರಿದಂತೆ, ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಕರಾವಳಿ ಜಿಲ್ಲೆಗಳ ವಿವಿಧ ಕ್ಷೇತ್ರಗಳ ಎಲ್ಲ ಪಕ್ಷಗಳ ಶಾಸಕರು, ಉನ್ನತ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ, ಕರಾವಳಿ ಭಾಗದಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಇರುವ ಅಡೆತಡೆಗಳನ್ನು ನಿವಾರಿ ಸುವ ನಿಟ್ಟಿನಲ್ಲಿ ಪೂರ್ವಭಾವಿ ಸಭೆಗಳಲ್ಲಿ ನಡೆದ ಚರ್ಚೆಗಳು, ಹಾಗೂ ಪರಿಷ್ಕೃತ ನಿಯಮ ಜಾರಿಗೆ ತರುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ಕ್ರಮಗಳ ಕುರುತಂತೆ ಸಭೆಯಲ್ಲಿ ಗಣಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ಒದಗಿಸಿದರು.
ವಾಣಿಜ್ಯ ಉದ್ದೇಶವಲ್ಲದ ಕೆಂಪುಕಲ್ಲು ಕ್ವಾರಿಗಳಿಗೆ ಅಧಿಕೃತವಾಗಿ ಪರವಾನಿಗೆ ಕೊಡುವ ವ್ಯವಸ್ಥೆಯನ್ನು ಸರಳೀಕ ರಣ ಮಾಡಲಾಗುವುದು. ಈ ನಿಟ್ಟಿನಲ್ಲಿ ಎಸ್‌ಒಪಿ ಡ್ರಾಫ್ಟ್‌ನ್ನು ಸಿದ್ಧಪಡಿಸುತ್ತಿರುವ ಬಗ್ಗೆ ಗಣಿ ಇಲಾಖೆ ಅಧಿಕಾರಿಗಳು ಮಾಹಿತಿ ಒದಗಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಮಣ್ಣು ಸಮತಟ್ಟು ಸೇರಿದಂತೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಡ್ರಿಲ್ ಮಾಡುವ ಕುರಿತಂತೆ ಇರುವ ಸಮಸ್ಯೆಯನ್ನು ಸರಿಪಡಿಸುವತ್ತ ಗಣಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ರಾಯಲ್ಟಿಯನ್ನು ಕಡಿಮೆಗೊಳಿಸಿ, ನಿಯಮ ಬದ್ಧವಾಗಿ ಕೆಂಪುಕಲ್ಲು ಗಣಿಗಾರಿಗೆಕೆ ಅವಕಾಶ ಕಲ್ಪಿಸುವಂತೆ ಗಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, ಸಮಯ ಮಿತಿಯೊಳಗೆ ಸುಲಭ ರೀತಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆಗೆ ಪರವಾನಿಗೆಗಳನ್ನು ನೀಡುವ ವ್ಯವಸ್ಥೆ ಕಲಿಸಿ ಎಂದು ಗಣಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯ ಕಟ್ಟಡ ಕಾಮಗಾರಿಗಳಿಗೆ, ಗೃಹ ನಿರ್ಮಾಣಕ್ಕೆ ಕೆಂಪುಕಲ್ಲು ಅಗತ್ಯವಾಗಿ ಬೇಕಾಗಿದೆ. ಕೆಂಪುಕಲ್ಲು ಗಣಿಗಾರಿಕೆ ಮಾಡುವವರು ಅರ್ಜಿ ಸಲ್ಲಿಸುವವರಿಗೆ ಶೀಘ್ರದಲ್ಲಿ ಅವಕಾಶ ಕಲ್ಪಿಸಿ, ತಿಂಗಳೊಳಗೆ ಪರವಾನಿಗಳು ದೊರಕಿಸಿಕೊ ಡುವತ್ತ ಹೆಚ್ಚಿನ ಗಮನ ಹರಿಸುವಂತೆ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿದರು.