ಮಂಗಳೂರು : ರಾಜ್ಯದ ಸರಕಾರಿ ಶಾಲೆಗಳಿಗೆ 13,000 ಹಾಗೂ ಅನುದಾನಿತ ಶಾಲೆಗಳಿಗೆ ಸುಮಾರು 5,500 ಸೇರಿದಂತೆ 18,500ಕ್ಕೂ ಅಧಿಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗಳ ಸಿದ್ಧತೆ ನಡೆದಿದೆ ಎಂದು ಶಿಕ್ಷಣ ಸಚಿವ ಎಸ್.ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ಹಿಂದಿನ ಸರಕಾರದ ಅವಧಿಯಲ್ಲಿ ಕೇವಲ 4,700 ಶಿಕ್ಷಕರ ನೇಮಕ ಮಾಡಲಾಗಿತ್ತು. ತಾನು ಶಿಕ್ಷಣ ಸಚಿವನಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಈಗಾಗಲೇ 13,000 ಸಾವಿರ ಶಿಕ್ಷಕರ ನೇಮಕಾತಿ ನಡೆದಿದ್ದು, ಮತ್ತೆ 18,500 ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆದಿದೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಹಿನ್ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬವಾಗಿತ್ತು ಎಂದರು.
ಎಲ್ ಕೆಜಿಯಿಂದ 12ನೆ ತರಗತಿವರೆಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಅಡಿಯಲ್ಲಿ ಶೇ. 80ರಷ್ಟು ಸರಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಈ ಶಾಲೆಗಳಲ್ಲಿ ಫಲಿತಾಂಶದ ಗುಣಮಟ್ಟವನ್ನು ಹೆಚ್ಚಿಸುವ ಸಲುವಾಗಿ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡುವುದಕ್ಕೆ ಕಡಿವಾಣ ಹಾಕಲಾಗಿದೆ. ಪರೀಕ್ಷಾ ವ್ಯವಸ್ಥೆಯನ್ನು ಉಚಿತವಾಗಿ ಮಾಡುವ ಮೂಲಕ ನಾನಾ ಕಾರಣಗಳಿಂದ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಅವಕಾಶ ಕಲ್ಪಿಸಿ ಮುಂದಿನ ಭವಿಷ್ಯ ರೂಪಿಸಲು ಅನುವು ಮಾಡಿಕೊಡಲಾಗಿದೆ. ಈ ಮಾದರಿಯನ್ನು ಕೇಂದ್ರ ಸರಕಾರವೂ ಕಾಪಿ ಮಾಡಿಕೊಳ್ಳಲು ಹೊರಟಿದೆ ಎಂದು ಕೇಂದ್ರ ಸರಕಾರವನ್ನು ಕುಟುಕಿದರು.
ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಗ್ಯಾರಂಟಿಗಳ ಬಗ್ಗೆ ವಿಪಕ್ಷವಾದ ಬಿಜೆಪಿ ವಿರೋಧಿಸಿದ್ದು, ದುಡ್ಡೇ ಸಿಗದು ಎಂದು ಅಪಪ್ರಚಾರ ಮಾಡಿತ್ತು. ಆದರೆ ಐದು ಗ್ಯಾರಂಟಿಗಳೂ ಇದೀಗ ಯಶಸ್ವಿಯಾಗಿ ಜಾರಿಯಾಗಿವೆ. ಇದೀಗ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರು ಪ್ರಧಾನಿ ನರೇಂದ್ರ ಮೋದಿ ನಡೆಸುವ ಜಾತಿ ಗಣತಿಯನ್ನೂ ವಿರೋಧಿಸುತ್ತಿರೆಯೇ ಎಂದು ಪ್ರಶ್ನಿಸಿದರು. ಕೇಂದ್ರ ಸರಕಾರವು ಅವೈಜ್ಞಾನಿಕವಾಗಿ ಜಿಎಸ್ ಟಿ ಜಾರಿಗೊಳಿಸಿ ಇದೀಗ ಕಡಿಮೆ ಮಾಡಿ ಸಂಭ್ರಮ ಪಡುತ್ತಿರುವುದು ಹಾಸ್ಯಾಸ್ಪದ ಅಲ್ವಾ ಎಂದರು.