ಮಂಗಳೂರು : ಯಾವುದೇ ಶಕ್ತಿ ಅಥವಾ ವ್ಯಕ್ತಿ ತಮ್ಮ ವೈಯಕ್ತಿಕ ಲಾಭಕ್ಕಾಗಿ ಇಲ್ಲಿನ ಯುವಕರನ್ನು ದಾರಿ ತಪ್ಪಿಸಿ ಹಿಂಸಾತ್ಮಕ ಚಟುವಟಿಕೆಗಳಲ್ಲಿ ತೊಡಗಲು ಪ್ರೋತ್ಸಾಹಿಸುವುದನ್ನು ಸರ್ಕಾರ ಸಹಿಸುವುದಿಲ್ಲ. ಇಂತಹ ಕೃತ್ಯಗಳು ಕಂಡುಬಂದಲ್ಲಿ ಅವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಯಾವುದೇ ಹಿಂಜರಿಕೆಯನ್ನು ತೋರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನೆಹರೂ ಮೈದಾನದಲ್ಲಿ ಜಿಲ್ಲಾ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮಗಳ ನೈಜ ಆಶಯಗಳನ್ನು ಪಾಲಿಸುತ್ತಾ, ಇತರ ಧರ್ಮಗಳನ್ನು ಪರಸ್ಪರ ಗೌರವಿಸಿದಲ್ಲಿ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ನೆಲೆಸಲಿದೆ. ಶಾಂತಿ ಮತ್ತು ಸಮನ್ವಯತೆ ಸ್ಥಾಪಿತವಾದಲ್ಲಿ ಜಿಲ್ಲೆಯು ಅಭಿವೃದ್ಧಿಗೊಂಡು, ಇಲ್ಲಿನ ಜನರ ಜೀವನಮಟ್ಟವೂ ಸುಧಾರಣೆಯಾಗಲಿದೆ ಎಂದು ಅವರು ಹೇಳಿದರು.
ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅತ್ಯುತ್ತಮ ಕಾನೂನು ಮತ್ತು ಸುವ್ಯವಸ್ಥೆಯಿಂದ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಸಾಧ್ಯವಾಗಲಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯ ಜನರ ಸಹಕಾರ ಅತ್ಯವಶ್ಯಕವಾಗಿದೆ. ವಿಚ್ಛಿದ್ರಕಾರಿ ಹಾಗೂ ಸಮಾಜವನ್ನು ಒಡೆಯುವ ಶಕ್ತಿಗಳು ಅಭಿವೃದ್ಧಿಗೆ ತೊಡಕಾಗುತ್ತಿವೆ ಎಂಬ ಸತ್ಯವನ್ನು ನಾವು ಅರಿಯಬೇಕಾಗಿದೆ ಎಂದು ಅವರು ಹೇಳಿದರು. ಸರ್ಕಾರದ ಪ್ರಯತ್ನದಿಂದ ಕಾನೂನು ಮತ್ತು ಸುವ್ಯವಸ್ಥೆ ಸುಧಾರಣೆಯಾಗಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬಲವಾದ ನೆಲೆ ಸಿದ್ಧಗೊಂಡಿದೆ. ಇದರ ಫಲವಾಗಿ ಇಲ್ಲಿನ ಯುವಕರು ಉದ್ಯೋಗಕ್ಕಾಗಿ ಬೇರೆ ರಾಜ್ಯಗಳು ಅಥವಾ ದೇಶಗಳಿಗೆ ವಲಸೆ ಹೋಗುವುದನ್ನು ತಡೆಯಲು ಹಾಗೂ ಸ್ಥಳೀಯವಾಗಿ ಉದ್ಯೋಗಾವಕಾಶಗಳನ್ನು ಸೃಜಿಸಲು ಸಾಧ್ಯವಾಗಲಿದೆ ಎಂದು ಸಚಿವರು ತಿಳಿಸಿದರು.