ಉಪ್ಪಿನಂಗಡಿ: ಶಿರಾಡಿ ಘಾಟ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯಾಹ್ನ ಕೆಎಸ್‌ಆರ್‌ಟಿಸಿ ರಾಜಹಂಸ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ ಸುಮಾರು 3.30 ಗಂಟೆಗೆ ಹಾಸನದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು (KA 21 N 5873) ಮತ್ತು ಧರ್ಮಸ್ಥಳದಿಂದ ತಿರುಪತಿಗೆ ತೆರಳುತ್ತಿದ್ದ ರಾಜಹಂಸ ಬಸ್ (KA 21 F 0239) ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಶಿಶಿಲದ ಚಂದ್ರಶೇಖರ (57), ಉಜಿರೆಯ ಜನಾರ್ದನ ಗೌಡ (58) ಮತ್ತು ಮರಕಡದ ಶ್ರೀಧರ ಗೌಡ (61) ರವರು ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಉಜಿರೆಯ ಸುರೇಶ್ (58) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಮದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.