ಮಂಗಳೂರು: ಆಳ್ವಾಸ್ ನುಡಿಸಿರಿ ವಿರಾಸತ್ ಮಂಗಳೂರು ಘಟಕದ ವತಿಯಿಂದ ನಗರದ ಲಾಲ್‌ಬಾಗ್‌ನ ಕರಾವಳಿ ಉತ್ಸವ ಮೈದಾನದಲ್ಲಿ ಮಾರ್ಚ್ 21ರ ಸಂಜೆ 6.15ಕ್ಕೆ ‘ಆಳ್ವಾಸ್ ಸಾಂಸ್ಕೃತಿಕ ವೈಭವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಶಿಕ್ಷಣ ತಜ್ಞ ಕೀರ್ತಿಶೇಷ ಡಾ. ಎನ್. ವಿನಯ್ ಹೆಗ್ಡೆ ಅವರ ಹೆಸರಿನ ವೇದಿಕೆಯಲ್ಲಿ ಈ ಸಾಂಸ್ಕೃತಿಕ ಸೌರಭ ಅನಾವರಣಗೊಳ್ಳಲಿದೆ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್ ನ ಅಧ್ಯಕ್ಷ ಡಾ. ಮೋಹನ್ ಆಳ್ವಾ ತಿಳಿಸಿದರು. ಅವರು ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು 45 ನಿಮಿಷಗಳ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಹಾಗೇಯೇ ಸಮಾಜದ ವಿವಿಧ ಸ್ತರಗಳ ಗಣ್ಯರು ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಿರಲಿದ್ದಾರೆ ಎಂದರು.
ವೈವಿಧ್ಯಮಯ ಕಲಾ ಪ್ರದರ್ಶನ:
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರು ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿರುವುದು ವಿಶೇಷ. ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ, ಬಡಗುತಿಟ್ಟು ಮತ್ತು ತೆಂಕುತಿಟ್ಟು ಯಕ್ಷಗಾನ (ಹಿರಣಾಕ್ಷ ವಧೆ), ಗುಜರಾತಿನ ದಾಂಡಿಯಾ, ಮಣಿಪುರಿ ಸ್ಟಿಕ್ ಡ್ಯಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ ಮತ್ತು ಪುರುಲಿಯಾ ಸಿಂಹ ನೃತ್ಯದಂತಹ ಹತ್ತಾರು ಕಲಾಪ್ರಕಾರಗಳು ಪ್ರೇಕ್ಷಕರನ್ನು ರಂಜಿಸಲಿವೆ. ಜೊತೆಗೆ ಬೊಂಬೆ ವಿನೋದಾವಳಿಯ ಪ್ರದರ್ಶನವೂ ಇರಲಿದೆ.
8,000 ಆಸನಗಳ ವ್ಯವಸ್ಥೆ: ಕಾರ್ಯಕ್ರಮ ವೀಕ್ಷಿಸಲು ಬರುವ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಸುಮಾರು 8,000ಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಸಾಂಸ್ಕೃತಿಕ ವೈಭವ ಆರಂಭವಾಗಲಿದ್ದು, ದೇಶದ ಸಂಸ್ಕೃತಿ ಮತ್ತು ಪರಂಪರೆಯನ್ನು ಒಂದೇ ವೇದಿಕೆಯಲ್ಲಿ ಕಣ್ತುಂಬಿಕೊಳ್ಳಲು ಇದು ಸುಸಂದರ್ಭವಾಗಿದೆ ಎಂದರು.