ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವದಲ್ಲಿ ಈ ಬಾರಿ ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ‘ಅಕ್ಷರ ಸಂತ’, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಸೇರಿದಂತೆ ಮೂವರು ಸಾಧಕರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲು ನಿರ್ಧರಿಸಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹರೇಕಳ ಹಾಜಬ್ಬ ಅವರ ಜೊತೆಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ, ತೆಂಕುತಿಟ್ಟಿನ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಹಾಗೂ ದೈವ ನರ್ತಕ ರವೀಶ್ ಪಡುಮಲೆ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು ಎಂದರು.
ಮಾ.28ರಂದು ಬೆಳಿಗ್ಗೆ 11ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಆವರಣದ ಮಂಗಳ ಸಭಾಂಗಣದಲ್ಲಿ ಘಟಿಕೋತ್ಸವ ನಡೆಯಲಿದೆ. ಕರ್ನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ವಿವಿ ಸಹಕುಲಾಧಿಪತಿಯೂ ಆಗಿರುವ ಡಾ.ಎಂ.ಸಿ. ಸುಧಾಕರ್ ಉಪಸ್ಥಿತರಿರಲಿದ್ದು, ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.
ಈ ಘಟಿಕೋತ್ಸವದಲ್ಲಿ 162 ಮಂದಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು. ಇವರಲ್ಲಿ 74 ಮಹಿಳೆಯರು ಹಾಗೂ 88 ಪುರುಷರು ಸೇರಿದ್ದಾರೆ. ಇದರಲ್ಲಿ 11 ಮಂದಿ ಅಂತಾರಾಷ್ಟ್ರೀಯ ವಿದ್ಯಾರ್ಥಿಗಳೂ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ ಎಂದು ಮಾಹಿತಿ ನೀಡಿದರು. ಉಳಿದಂತೆ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ರ‍್ಯಾಂಕ್ ಗಳಿಸಿದ 147 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಲಾಗುವುದು.
ಪತ್ರಿಕಾಗೋಷ್ಠಿಯಲ್ಲಿ ಕುಲಸಚಿವ ಪ್ರೊ.ದೇವೇಂದ್ರಪ್ಪ, ಪರೀಕ್ಷಾಂಗ ನಿಯಂತ್ರಕ ಗಣೇಶ್ ಸಂಜೀವ ಹಾಗೂ ಹಣಕಾಸು ಅಧಿಕಾರಿ ಪಂಚಲಿಂಗಸ್ವಾಮಿ ಉಪಸ್ಥಿತರಿದ್ದರು.